2nd Puc: ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್: ಸಚಿವ ಮಧುಬಂಗಾರಪ್ಪ ಘೋಷಣೆ!
2nd Puc: ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಬಜೆಟ್ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್ ಬುಕ್ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್ʼಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಆದರೆ ಎಲ್ಲವನ್ನೂ ಒಮ್ಮೆಲೆ ಮಾಡಲಾಗುವುದಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ. ಇದಕ್ಕೆ ಅಗತ್ಯ ಎಲ್ಲ ಸೌಕರ್ಯಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಕರ್ನಾಟಕದಾದ್ಯಂತ 1,000 ಪಬ್ಲಿಕ್ ಶಾಲೆ ನಿರ್ಮಾಣ
ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುತ್ತಿದ್ದು, ರಾಜ್ಯಾದ್ಯಂತ 1,000 ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಚಾಲನೆ ನೀಡಿದೆ. ಇದಕ್ಕೆ ಅಗತ್ಯ ಸಂಪನ್ಮೂಲದ ಕ್ರೋಢೀಕರಣ ನಡೆಯುತ್ತಿದ್ದು, ಈ ಶಾಲೆಗಳಲ್ಲಿ ಎಲ್ಕೆಜಿಯಿಂದ ದ್ವಿತೀಯ ಪಿಯುಸಿಯವರೆಗೂ ಒಂದೇ ಕಡೆ ಮಕ್ಕಳಿಗೆ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಂಯುಕ್ತವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ʻಕರ್ನಾಟಕ ಪಬ್ಲಿಕ್ ಸ್ಕೂಲ್ ʼ(ಕೆಪಿಎಸ್)ನ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ' (KPS)ಗಳಾಗಿ ಉನ್ನತೀಕರಿಸಿ, ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವನ್ನು ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ (ADB) ನೀಡಿದೆ. ಈ ಸಂಬಂಧದ ಒಪ್ಪಂದಕ್ಕೆ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಸಹಿ ಮಾಡಲಾಗಿದೆ. ಇದರಿಂದ ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಕ್ಕಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 750 ಕೋಟಿ ರೂ.ಗಳನ್ನು ಒದಗಿಸಿ, 500 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿ ಪಡಿಸಲಿದೆ ಎಂದು ಸಚಿವರು ತಿಳಿಸಿದರು.
ಸಿಎಸ್ಆರ್ ನಿಧಿ ಬಳಕೆ
ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CCSR) ನಿಧಿಯನ್ನು ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ವಿಶೇಷವಾದ ಉಪಕ್ರಮವನ್ನು ಜಾರಿಗೆ ತರಲಾಗಿದೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮಾಡಲು ನಾವು ಮುಂದಾಗಿದ್ದೇವೆ ಎಂದು ಸಚಿವರು ವಿವರಿಸಿದರು. ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದರು. ಶನಿವಾರ ಶಂಕುಸ್ಥಾಪನೆ ನೆರವೇರಿದ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಡ್ಡಟ ನಿರ್ಮಾಣಕ್ಕೆ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ₹13.50 ಕೋಟಿ ದೇಣಿಗೆ ನೀಡಿದೆ. ಒಂದು ವರ್ಷದ ಒಳಗೆ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಅವರಿಗೆ ಇಲ್ಲಿ ಓದುವ ಎಲ್ಲಾ ಮಕ್ಕಳ ಪರವಾಗಿ ಮತ್ತು ನಮ್ಮ ಸರ್ಕಾರದ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.
15 ಸಾವಿರ ಶಿಕ್ಷಕರ ನೇಮಕ
ಕಳೆದ ಮೂರು ವರ್ಷಗಳಲ್ಲಿ ಶಿಕ್ಷಣ ಸಚಿವರಾಗಿ ತಾವು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಗಮನ ಸೆಳೆದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ನಾನು ಈ ಹಿಂದೆ ಹೇಳಿದಂತೆ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದೇವೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ನಾವು ತೆಗೆದುಕೊಂಡ ಕ್ರಮಗಳಿಂದಾಗಿ ಈ ಬಾರಿಯ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ದಾಖಲೆ ಫಲಿತಾಂಶ ಬಂದಿದೆ ಎಂದಿದ್ದಾರೆ.


Click it and Unblock the Notifications
