Police Department: ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿ: ಗುಡ್ ನ್ಯೂಸ್ ಕೊಟ್ಟ ಪರಮೇಶ್ವರ್
ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು. ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಜಗದೇವ್ ಗುತ್ತೇದಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ.
ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಇದೆ ವೇಳೆ ಸದಸ್ಯರ ಪ್ರಶ್ನೆಗೆ ಮಾಹಿತಿ ನೀಡಿದರು.

ಪೊಲೀಸರು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
ರಾಜ್ಯದ ಪೊಲೀಸರು ಹಾಗೂ ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು/ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್. ಐ. ಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆoಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದರು. ರಾಜ್ಯದ ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯದ ಮೇಲೆ ಉನ್ನತಾಧಿಕಾರಿಗಳು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ.
ಪೊಲೀಸ್ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಲು ಸಭೆಗಳನ್ನು ಕರೆದು ಉನ್ನತಾಧಿಕಾರಿಗಳಿಂದ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ದುರ್ನಡತೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರುಗಳ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸಲಾಗುತ್ತಿದೆ. ನೈತಿಕ ಮಾನದಂಡಗಳು, ಕಾನೂನು ಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ / ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಕ್ರಮಗಳ ಮೂಲಕ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ತಿಳುವಳಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.












Click it and Unblock the Notifications