ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-5: 4,000.00 ಕೋಟಿ ಅಂದಾಜು!
ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-5 ಘಟ್ಟ-1 ರಡಿಯಲ್ಲಿ 467 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 4,000.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ರಸ್ತೆ ನಿರ್ಮಾಣದ ನಂತರ 6ನೇ ವರ್ಷದಲ್ಲಿ ಡಾಂಬರು ಮೇಲ್ಪದರವನ್ನು ಅಳವಡಿಸಲು ಪ್ರಾವಧಾನ ಮಾಡಲಾಗಿರುವ ಅಂಶವನ್ನು ಕೈಬಿಡಲು ಸಚಿವ ಸಂಪುಟ ಒಪ್ಪಲಿಲ್ಲ. ಆದರೆ ಆಯಾ ಕಾಮಗಾರಿಗಳ ಅಡಿಯಲ್ಲಿ ಸ್ಥಳದ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಹೆಚ್ ಕೆ ಪಾಟೀಲ್ ಹೇಳಿದರು.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಎಚ್ ಕೆ ಪಾಟೀಲ್ ಅವರು ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಗುಳ್ಳಾಪುರ ಗ್ರಾಮದಿಂದ ಹೆಗ್ಗಾರ ಗ್ರಾಮಕ್ಕೆ ಸಂಪರ್ಕಿಸುವ ಜಿಲ್ಲಾ ಮುಖ್ಯ ರಸ್ತೆಯ ಗಂಗಾವಳಿ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ.35.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಸಜ್ಜೆಪಾಳ್ಯ ಗ್ರಾಮದಲ್ಲಿರುವ ಸರ್ವೆ ನಂಬರ್ 04ರಲ್ಲಿ ಲಭ್ಯವಿರುವ ಜಮೀನಿನಲ್ಲಿ 5 ಎಕರೆ ಜಮೀನನ್ನು ಪರಿಶಿಷ್ಟ ಪಂಗಡಗಳ ನಿರ್ದೇಶನಾಲಯ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಂದ್ರ ಕಛೇರಿಗಳಿಗೆ ಸ್ಥಳಾವಕಾಶ ಕಲ್ಪಿಸಲು "ಶ್ರೀ ಮಹರ್ಷಿ ವಾಲ್ಮೀಕಿ ಸೌಧ" ನಿರ್ಮಾಣ ಮಾಡಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಸಚಿವ ಸಂಪುಟ ಒಪ್ಪಿದೆ.
ಮೆ|| ಗೇಲ್ ಇಂಡಿಯಾ ಲಿಮಿಟೆಡ್ ಸಂಸ್ಥೆ ವತಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ದಿನ ಉತ್ಪತ್ತಿಯಾಗುವ ಘನತ್ಯಾಜ್ಯದ ಪೈಕಿ 300 ಮೆಟ್ರಿಕ್ ಟನ್ ಹಸಿ ತ್ಯಾಜ್ಯವನ್ನು ಪಯೋಗಿಸಿಕೊಂಡು Compressed Bio-Gas Plant ಅನ್ನು ಸ್ಥಾಪಿಸಲು ಹರಳಗುಂಟೆ ಗ್ರಾಮದ (KCDC ಸಂಸ್ಕರಣಾ ಘಟಕ) ಸರ್ವೆ ನಂ: 39, 40, 45 ಮತ್ತು 46ರಲ್ಲಿ ಲಭ್ಯವಿರುವ ಸುಮಾರು 18.00 ಎಕರೆ ಜಾಗವನ್ನು ಸೀಮಿತ ಬಳಕೆಗೋಸ್ಕರ ಮಾತ್ರ (For permissive use only) ಆಧಾರದಲ್ಲಿ 25 ವರ್ಷಗಳ ಅವಧಿಗೆ ಮೆ|| ಗೇಲ್ ಇಂಡಿಯಾ ಲಿಮಿಟೆಡ್ ಸಂಸ್ಥೆಗೆ ನೀಡಲು ಸರ್ಕಾರಿ ಆದೇಶ ದಿನಾಂಕ: 30.12.2022 ನ್ನು ಪರಿಷ್ಕರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೈರಮಂಗಲ ಕೆರೆಯ ದಡದಲ್ಲಿ 100 ದಶಲಕ್ಷ ಲೀಟರ್ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಶುದ್ದೀಕರಣ ಘಟಕ ಹಾಗೂ 25 ದಶಲಕ್ಷ ಲೀಟರ್ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ ಮತ್ತು ಈ ಘಟಕಗಳ 07 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ (O&M)ಯನ್ನು ಒಟ್ಟು ರೂ. 391.82 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಶಿಗ್ಗಾಂವ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ನಾಗನೂರ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ.105.19 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ತೆವರಮಳ್ಳಿಹಳ್ಳಿ ಕೆರೆ ಸುಧಾರಣಾ ಕಾಮಗಾರಿಗಳನ್ನು ರೂ.92.84 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಸವಣೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಮೋತಿ ತಲಾಬ ಕರೆ ಸುಧಾರಣಾ ಕಾಮಗಾರಿಗಳನ್ನು ರೂ.153.20 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣ ಪಂಚಾಯತಿಯ ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ ಆಸ್ತಿ ನಂ.3741, ಕ್ಷೇತ್ರ-400.63 ಚ.ಮೀಟರ್ ನಿವೇಶನವನ್ನು, ಕಾಂಗ್ರೆಸ್ ಭವನ ಟ್ರಸ್ಟ್ , ಬೆಂಗಳೂರು ಇವರಿಗೆ 30 ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಸಚಿವ ಸಂಪುಟ ಒಪ್ಪಿದೆ.
ರಾಯಚೂರು ಜಿಲ್ಲೆ, ಮಾನ್ಸಿ ತಾಲ್ಲೂಕಿನ ಯಡವಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ನೀರನ್ನೆತ್ತಿ, ತುಂಗಭದ್ರಾ ಎಡದಂಡೆ ಕಾಲುವೆಯ ವಿತರಣಾ ಕಾಲುವೆ 76ರಡಿ ಸುಮಾರು 10,000 ಎಕರೆ ಬಾಧಿತ ಅಚ್ಚು ಕಟ್ಟಿಗೆ ನೀರೊದಗಿಸುವ ರೂ.109.10 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ಹೆಬ್ಬಕವಾಡಿ ಶಾಖಾ ನಾಲೆ ಮತ್ತು ನಿಡಘಟ್ಟ ಶಾಖಾ ನಾಲೆಯ ಅಭಿವೃದ್ಧಿ ಕಾಮಗಾರಿಯ 2ನೇ ಹಂತದ ಕಾಮಗಾರಿಯನ್ನು ರೂ.293.47 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಹೊಸಹೊಳಲು ಎಡದಂಡೆ ನಾಲೆ ಸರಪಳಿ 11.00ಕಿ.ಮೀ. ನಿಂದ 16.00 ಕಿ.ಮೀ. ವರೆಗೆ ಉಳಿಕೆ ಕಾಮಗಾರಿ ಹಾಗೂ ಆಧುನೀಕರಣ ಕಾಮಗಾರಿಯನ್ನು ರೂ. 21.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸಚಿವ ಸಂಪುಟ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಮತ್ತು ನದಿ ದಂಡೆಯಲ್ಲಿ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಯನ್ನು ರೂ.50.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.












Click it and Unblock the Notifications