ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ; ಸಿದ್ದರಾಮಯ್ಯ ಬೇಡಿಕೆ ಏನು?
ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕ ಸರ್ಕಾರ ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ ಕೋವಿಡ್‌ನಿಂದ ಮೃತಪಟ್ಟವರ ಪ್ರತಿ ಕುಟುಂಬದವರಿಗೂ 5 ಲಕ್ಷ ರೂ. ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Recommended Video
ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಈ ಕುರಿತು ಕರ್ನಾಟಕದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರ, ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಭವಿಷ್ಯವನ್ನೇ ನಾಶ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಮೊದಲು ಕೋವಿಡ್ ಸಾವಿನ ಸಂಖ್ಯೆಯ ಸುಳ್ಳು ಲೆಕ್ಕ ನೀಡಿ ಕಡಿಮೆ ತೋರಿಸಿದಿರಿ, ಈಗ ಪರಿಹಾರದ ಮೊತ್ತವನ್ನು ಕೂಡಾ ಕಡಿತಗೊಳಿಸಿ ಸತ್ತವರ ಜೊತೆ ಬದುಕಿರುವ ಅವರ ಕುಟುಂಬವನ್ನೂ ಸಾಯಿಸಲು ಹೊರಟಿದ್ದೀರಿ. ನೊಂದವರ ಶಾಪ ಸರ್ಕಾರಕ್ಕೆ ತಟ್ಟದೆ ಇರಲಾರದು ಎಂದು ಹೇಳಿದ್ದಾರೆ.
ಕೆಪಿಸಿಸಿ ನಡೆಸಿರುವ ಸಮೀಕ್ಷೆಯ ಪ್ರಕಾರ ಕೊರೊನಾ ಸಾವಿನ ಸಂಖ್ಯೆ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಅವರ ಸಮೀಕ್ಷೆ ಪ್ರಕಾರ ಇದು ಮೂರುವರೆಯಿಂದ ನಾಲ್ಕು ಲಕ್ಷ. ರಾಜ್ಯ ಸರ್ಕಾರ 37,603 ಸೋಂಕಿತರು ಮಾತ್ರ ಸತ್ತಿದ್ದಾರೆ ಎಂದು ಸುಳ್ಳು ಲೆಕ್ಕ ನೀಡಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ
ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಲೇಬೇಕು ಎಂದು ಒತ್ತಾಯಿಸಿದ್ದೆವು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು ದಿನಾಂಕ 14/3/2020ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ಆದೇಶವನ್ನು ದಿನ ಮಾರ್ಪಡಿಸಿಕೊಂಡಿದೆ.

ಕೇಂದ್ರ ಸರ್ಕಾರದ ಆದೇಶ
ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ.
ಆದರೆ ದಿನಾಂಕ 28/9/2021ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್‌ನಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ. 1 ಲಕ್ಷ, ಕೇಂದ್ರ ಸರ್ಕಾರದಿಂದ ರೂ. 50,000 ನೀಡುವುದಾಗಿ ಆದೇಶ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಹಾರ ನೀಡದೆ ನುಣುಚಿಕೊಳ್ಳುವುದು
ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದಲೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಿವೆ. ಕೋವಿಡ್ ಸೋಂಕು ಹೆಚ್ಚಿದ್ದಾಗ ಸರ್ಕಾರ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತೆ ಮಾಡಿ, ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳುತ್ತಿವೆ. ಸರ್ಕಾರದ ಈ ನಡೆ ಅಮಾನವೀಯವಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್ ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ನೀಡಬೇಕು. ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕೆಂಬ ನಿಯಮವನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿಪಿಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ ರೂ. 1.5 ಲಕ್ಷ (ಕೇಂದ್ರ, ರಾಜ್ಯಗಳೆರಡೂ ಸೇರಿ) ನೀಡಲಾಗುವುದೆಂದು ಹೇಳುತ್ತಿದೆ.
ರಾಜ್ಯ ಸರ್ಕಾರಗಳಿಗೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರ ಕೇಂದ್ರವನ್ನು ಆಗ್ರಹಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications