ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಕರ್ನಾಟಕದಲ್ಲಿನ ಅಂಗಡಿಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸುವಂತೆ ಸಚಿವ ಶಿವರಾಜ್ ತಂಗಡಗಿ ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಶೇ.60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ರೂಪಿಸುವ ವಿಚಾರ ವಿಚಾರವಾಗಿ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಕರ್ನಾಟಕದಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ ಕಠಿಣವಾದ ಕ್ರಮ ಆಗಬೇಕು. ಶೀಘ್ರವೇ ನಿಯಮಗಳ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೊಲೀಸರು ಇರುವ ಟಾಸ್ಕ್ ಫೋರ್ಸ್ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂಬ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕನ್ನಡಪರ ಸಂಘಟನೆಗಳ ಹೋರಾಟದ ಫಲ: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿರುವ ಅಂಗಡಿಗಳ ನಾಮಫಲಕದಲ್ಲಿ ಕನ್ನಡ ಬಳಸದೆ ಇರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ಕನ್ನಡಪರ ಸಂಘಟನೆಗಳ ತೀವ್ರ ವಿರೋಧ ಹಾಗೂ ಹೋರಾಟದ ನಂತರ ರಾಜ್ಯದಲ್ಲಿ ಎಲ್ಲಾ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಕನ್ನಡ ಬಳಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಆದೇಶ ಹೊರಡಿಸಿತ್ತು. ಇದಾದ ಮೇಲೂ ಕೆಲವು ಕಡೆಗಳಲ್ಲಿ ಕನ್ನಡ ಬಳಕೆಗೆ ಕೆಲವರು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಇದೆ. ಇದೀಗ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮತ್ತೊಂದು ಪ್ರಮುಖ ಹೆಜ್ಜೆಯನ್ನು ಇರಿಸಿದೆ.












Click it and Unblock the Notifications