7th Pay Commission: ವೇತನ ಆಯೋಗದ ವರದಿ ಜಾರಿಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಎರಡು ವಾರಗಳ ಡೆಡ್‌ಲೈನ್ ನೀಡಿದ ಸರ್ಕಾರಿ ನೌಕರರು
ಬೆಂಗಳೂರು, ಜೂನ್. 15: ಏಳನೇ ವೇತನ ಆಯೋಗದ ವರರಿ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ವರದಿ ಸಲ್ಲಿಕೆಯಾಗಿ ಮೂರು ತಿಂಗಳು ಕಳೆದಿದೆ. ಆದರೆ, ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರ ಅಥವಾ ಚರ್ಚೆ ಆಗದ ಬಗ್ಗೆ ಸರ್ಕಾರಿ ನೌಕರರು ಆಕ್ರೋಶ ಹೊರಹಾಕಿದ್ದಾಋಎ.
30% ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿರುವ ನೌಕರರು 7ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವ ಕುರಿತು ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರಕ್ಕೆ ನೌಕರರ 2 ವಾರದ ಗಡುವು
ಕೆ.ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ತನ್ನ ವರದಿಯನ್ನು ಸಿದ್ಧಪಡಿಸಿ ಮಾರ್ಚ್ 16 ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ವರದಿ ಸಲ್ಲಿಸಿದ ಒಂದು ದಿನದ ನಂತರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ನೀತಿ ಸಂಹಿತೆ ಅಡ್ಡಿ ಬಂದು ಸರ್ಕಾರಿ ನೌಕರರು ವರದಿ ಅನುಷ್ಠಾನಕ್ಕಾಗಿ ಕಾದು ಕುಳಿತಿದ್ದರು.
ನೀತಿ ಸಂಹೀತೆ ತೆರವಾದ ತಕ್ಷಣ ಮೊದಲ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಲಿದೆ. ವೇತನ ಆಯೋಗದ ವರದಿಯನ್ನು ಜಾರಿಗೆ ತರಲಿದೆ ಎಂದು ಕಾಯುತ್ತಿದ್ದರು. ಆದರೆ, ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗದೆ ಇರುವುದಕ್ಕೆ ಆಕ್ರೋಶ ಹೊರಹಾಕಿರುವ ನೌಕರರ ಸಂಘ ಎರಡು ವಾರಗಳಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು, ಇಲ್ಲದಿದ್ದರೇ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ಶೇಕಡಾ 30 ರಷ್ಟು ವೇತನ ಹೆಚ್ಚಳ ಮಾಡಬೇಕು!
ರಾಜ್ಯ ಸರ್ಕರಾ ಈ ಕೂಡಲೇ ಶೇಕಡಾ 30 ರಷ್ಟು ವೇತನ ಹೆಚ್ಚಳ ಮಾಡಬೇಕು. ಈ ಬಗ್ಗೆ ಉದಾಸೀನ ಧೋರಣೆ ಮುಂದುವರೆಸಿದರೆ ರಾಜ್ಯಮಟ್ಟದ ಸಂಘಟನೆ ಜೊತೆ ಸೇರಿ ಚರ್ಚಿಸಿ ಪ್ರತಿಭಟನೆಯ ರೂಪುರೇಷೆ ಸಿದ್ದಪಡಿಸಲಾಗುತ್ತದೆ ಎಂದು ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ತಿಳಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮೊದಲೇ ಮಾರ್ಚ್‌ನಲ್ಲಿ 7ನೇ ವೇತನ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ. ಚುನಾವಣೆ ಬಳಿಕ ವರದಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದರು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳದೇ ಇರುವುದು ನೌಕರರಿಗೆ ತೀವ್ರ ನಿರಾಸೆಯಾಗಿದೆ ಎಂದು ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು, ಏಳನೇ ವೇತನ ಆಯೋಗದ ವರದಿ ಜಾರಿಯಾದರೆ ಬೊಕ್ಕಸಕ್ಕೆ ಬರೋಬ್ಬರಿ 17 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ. ನೌಕರರ ವೇತನ ಹೆಚ್ಚಳ, ಪಿಂಚಣಿ ಸೇರಿ ಎಲ್ಲವೂ ಹೆಚ್ಚಾಗುವ ಕಾರಣ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ತಮ್ಮ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಕೋಟ್ಯಾಂತರ ರೂಪಾಯಿ ಮೀಸಲಿಡುತ್ತಿದೆ. ಹೀಗಾಗಿ ವೇತನ ಆಯೋಗದ ಜಾರಿ ವಿಚಾರದಲ್ಲಿ ನಿಧಾನಗತಿ ಅನುಸರಿಸುತ್ತಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ.












Click it and Unblock the Notifications