7th Pay Commission; ವೇತನ ಪರಿಷ್ಕರಣೆ ಬಗ್ಗೆ ಸಿಎಂ ಭರವಸೆ ಏನು?
ಬೆಂಗಳೂರು, ಜನವರಿ 16: ಕರ್ನಾಟಕ ಸರ್ಕಾರದ ಮುಂದೆ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಮಂಗಳವಾರ ಭರವಸೆಯೊಂದನ್ನು ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗವು ಮಂಗಳವಾರ ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಸಂಘ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

"7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆಯನ್ನು ನೀಡಿದರು.
ನಿಯೋಗದ ಮನವಿ ಏನು?; ಸರ್ಕಾರಿ ನೌಕರರ ಸಂಘ 7ನೇ ರಾಜ್ಯ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ತನಕ ಆಯೋಗದ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿಯನ್ನು ಸಲ್ಲಿಕೆ ಮಾಡಿತು.
ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11,366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಸಹ ಸರ್ಕಾರಿ ನೌಕರರ ಸಂಘ ಮನವಿ ಮಾಡಿತು.
ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮನವಿ ಮಾಡಿದರು.
ಮಂಗಳವಾರ ಮಧ್ಯಾಹ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 7ನೇ ರಾಜ್ಯ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಘವು ರೂಪಿಸಿರುವ ಕಾರ್ಯಕ್ರಮದ ಪ್ರಗತಿ ಬಗ್ಗೆ ಚರ್ಚಿಸಲು ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರುಗಳ ಸಭೆ ನಡೆಯಿತು.
ಈ ಸಭೆಯ ಬಳಿಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 7ನೇ ರಾಜ್ಯ ವೇತನ ಆಯೋಗದ ವರದಿ ಕುರಿತು ಮನವಿಯನ್ನು ಸಲ್ಲಿಕೆ ಮಾಡಿತು. ಆಗ ಮುಖ್ಯಮಂತ್ರಿಗಳು ಅಂತಿಮ ವರದಿ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗ ರಚನೆ ಮಾಡಲಾಗಿತ್ತು. ಈ ಕುರಿತು ದಿನಾಂಕ 9/11/2022ರ ಆದೇಶ ಪ್ರಕಟಿಸಲಾಗಿತ್ತು. ಮೂವರು ಸದಸ್ಯರ 7ನೇ ರಾಜ್ಯ ವೇತನ ಆಯೋಗ 2023ರ ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಅಂದಾಜಿಸಲಾಗಿತ್ತು.
ಕಾಂಗ್ರೆಸ್ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 15/3/2023ರ ತನಕ ವಿಸ್ತರಣೆ ಮಾಡಿ ನವೆಂಬರ್‌ನಲ್ಲಿ ಆದೇಶ ಹೊರಡಿಸಿದೆ. ಆಯೋಗ ಅಂತಿಮ ವರದಿ ನೀಡುವ ಸಮಯಕ್ಕೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆ ಇದೆ.
7ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದು ಮತ್ತು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಸರ್ಕಾರಿ ನೌಕರರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.












Click it and Unblock the Notifications