7th Pay Commission: ಅನುದಾನಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಬೇಡಿಕೆ ಏನು?
ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುತ್ತಿದೆ. ಆಯೋಗ ಸಲ್ಲಿಕೆ ಮಾಡಿರುವ 558 ಪುಟಗಳ ಸಂಪುಟ-1ರ ವರದಿಯ ಕೆಲವು ಶಿಫಾರಸುಗಳು ಆಗಸ್ಟ್ ತಿಂಗಳಿನಿಂದಲೇ ಜಾರಿಗೆ ಬರಲು ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ. ಇದರಿಂದಾಗಿ ಸರ್ಕಾರಿ ನೌಕರರ ವೇತನ, ಪಿಂಚಣಿಯಲ್ಲಿ ಏರಿಕೆಯಾಗಿದೆ. ನೌಕರರ ಭತ್ಯೆಗಳು ಸಹ ಹೆಚ್ಚಳವಾಗಿದೆ.
ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸು ಜಾರಿಗೊಳಿಸುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ಅತೀಕ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರ್ಥಿಕ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೇ ಯಾವ ನೌಕರರ ವೇತನ ಎಷ್ಟು ಏರಿಕೆ? ಎಂದು ಮತ್ತೊಂದು ಆದೇಶವನ್ನು ಸರ್ಕಾರ ಹೊರಡಿಸಿದೆ.

ಅನುದಾನಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರು: ಈಗ ಅನುದಾನಿತ ಪದವಿ ಪೂರ್ವ ಕಾಲೇಜು ಉಪನ್ಯಾಸಕರು 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸರ್ಕಾರದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಬೇಡಿಕೆಯನ್ನು ಜಾರಿಗೊಳಿಸುವ ಅಧಿಕಾರವನ್ನು ಸರ್ಕಾರ ಒಳಾಡಳಿತ ಇಲಾಖೆಗೆ ನೀಡಿದೆ. ಆದ್ದರಿಂದ ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್‌ಗೆ ಪತ್ರವನ್ನು ಬರೆದಿದ್ದಾರೆ. ಅನುದಾನಿತ ಪದವಿಪೂರ್ವ ಕಾಲೇಜುಗಳ ಎಲ್ಲ ನೌಕರರಿಗೂ ಕಳೆದ ಆಗಸ್ಟ್ 1ರಿಂದಲೇ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಕೋರಿದ್ದಾರೆ.
ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಆಗಸ್ಟ್ 1ರಿಂದ ಅನ್ವಯಿಸಿ ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ. ಅಲ್ಲದೇ ವರದಿ ಜಾರಿಗೊಳಿಸುವ ಅಧಿಕಾರವನ್ನು ಒಳಾಡಳಿತ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ 19/11/2022ರ ಸರ್ಕಾರಿ ಆದೇಶದಂತೆ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು. 2024ರ ಮಾರ್ಚ್ 16ರಂದು ಆಯೋಗ ವರದಿಯ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ.
ಜುಲೈನಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 7ನೇ ರಾಜ್ಯ ವೇತನ ಆಯೋಗದ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿದೆ. ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಅಂಗೀಕರಿಸಿದೆ. ಆಯೋಗ ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ದಿನಾಂಕ 01/07/2022ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಒಪ್ಪಿಗೆ ಕೊಟ್ಟಿದೆ.












Click it and Unblock the Notifications