85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?
ಬೆಂಗಳೂರು, ಅಕ್ಟೋಬರ್ 18 : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆ ಇದೆ. ಡಿಸೆಂಬರ್ ತಿಂಗಳಿನಲ್ಲಿ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಬೇಕಿತ್ತು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಕುರಿತು ಮಾತನಾಡಿದ್ದಾರೆ. "2020ರ ಜನವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ನಡೆಸಲು ಚಿಂತನೆ ನಡೆದಿದೆ.
"ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಬ್ಯುಸಿ ಇರುತ್ತಾರೆ. ಆದ್ದರಿಂದ, ಸಾಹಿತ್ಯ ಸಮ್ಮೇಳನದ ಕಾರ್ಯದಲ್ಲಿ ತೊಡಗಿಕೊಳ್ಳಲು ಕಷ್ಟವಾಗುತ್ತದೆ. ಚುನಾವಣೆ ಮುಗಿದ ಬಳಿಕ ತಯಾರಿ ಆರಂಭಿಸಿ ಜನವರಿಯಲ್ಲಿ ಸಮ್ಮೇಳನ ನಡೆಸಲಾಗುತ್ತದೆ" ಎಂದು ಗೋವಿಂದ ಕಾರಜೋಳ ಹೇಳಿದರು.
84ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆದಿತ್ತು. 85ನೇ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿಯಲ್ಲಿ ನಡೆಸಲಿ ತೀರ್ಮಾನಿಸಲಾಗಿತ್ತು. ಈಗ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆ ಇದೆ.
ಕರ್ನಾಟಕದ 15 ವಿಧಾಸಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications