90% ಒಕ್ಕಲಿಗರು ಪ್ರಧಾನಿ ಮೋದಿ, ದೇವೇಗೌಡರನ್ನು ಬೆಂಬಲಿಸುತ್ತಾರಂತೆ!?
ಬೆಂಗಳೂರು, ಏಪ್ರಿಲ್. 13: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಮೊದಲನೆ ಹಂತದ ಮತದಾನಕ್ಕೆ ಅಭ್ಯರ್ಥಿಗಳು ಅಂತಿಮವಾಗಿದ್ದು, ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇದೇ ವೇಳೆ ಚುನಾವಣಾ ಪ್ರಚಾರ ಭರ್ಜರಿಯಾಗಿ ಸಾಗುತ್ತಿದ್ದು, ರಾಜಕೀಯ ಪಕ್ಷಗಳು ಕೆಸರೆರಚಾಟದಲ್ಲಿ ತೊಡಗಿವೆ.
ರಾಜ್ಯದಲ್ಲಿ ಪ್ರಭಾವಿ ಸಮುದಾಯವಾಗಿರುವ ಒಕ್ಕಲಿಗರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಬೆಂಬಲ ನೀಡುತ್ತಾರೆ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಆರ್ ಅಶೋಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ಕರ್ನಾಟಕದ ಎರಡು ಪ್ರಭಾವಿ ಸಮುದಾಯಗಳಾಗಿವೆ, ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗರು ಮತ್ತು ಉತ್ತರ ಕರ್ನಾಟಕದಿಂದ ಲಿಂಗಾಯತರು ಪ್ರಭಾವ ಬೀರುತ್ತಾರೆ.

ಮೋದಿ, ದೇವೇಗೌಡರ ಪರ ಒಕ್ಕಲಿಗರು!
"ಈ ಚುನಾವಣೆಯಲ್ಲಿ ಮೋದಿ ಫ್ಯಾಕ್ಟರ್ ಒಕ್ಕಲಿಗ ಫ್ಯಾಕ್ಟರ್‌ನಾದ್ಯಂತ ಕೆಲಸ ಮಾಡುತ್ತದೆ. ಮಾಝಿ ಪ್ರಧಾನಿ ಎಚ್ ಡಿ ದೇವೇಗೌಡರು ಕರ್ನಾಟಕದಲ್ಲಿ ಒಕ್ಕಲಿಗರಿಗೆ ಅಗ್ರಮಾನ್ಯ ನಾಯಕರಾಗಿದ್ದಾರೆ. ಅವರು ಒಕ್ಕಲಿಗರ ಐಕಾನ್ ಆಗಿದ್ದಾರೆ. 90 ರಷ್ಟು ಒಕ್ಕಲಿಗ ಮತದಾರರು ಮೋದಿ ಮತ್ತು ದೇವೇಗೌಡರಿಗೆ ಮತ ಹಾಕುತ್ತಾರೆ ಎಂದು ನಾನು ವಿಶ್ವಾಸ ವ್ಯಕ್ತಪಡಿಸುತ್ತೇನೆ. ಇಲ್ಲಿ ಕಾಂಗ್ರೆಸ್ ಇಲ್ಲವೆ ಇಲ್ಲ" ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುರಿತು ಪ್ರತಿಕ್ರಿಯಿಸಿದ ಆರ್. ಅಶೋಕ, 'ಈಶ್ವರಪ್ಪನವರ ಸಮಸ್ಯೆ ಮುಗಿದಿದೆ ಎಂದು ಭಾವಿಸಿದ್ದೇನೆ. ತಾವು ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಲಿದೆ" ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿಯ ಬಂಡಾಯ ನಾಯಕ ಕೆ ಎಸ್ ಈಶ್ವರಪ್ಪ ಶುಕ್ರವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷದ ಆಜ್ಞೆಯನ್ನು ಧಿಕ್ಕರಿಸಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಹಾಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಹಾವೇರಿ ಲೋಖಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಈಶ್ವರಪ್ಪ ಪಕ್ಷದ ವಿರುದ್ಧ ಅದರಲ್ಲೂ ಬಿಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷದಲ್ಲಿನ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಮಗನಿಗೆ ಟಿಕೆಟ್ ಕೊಡಿಸುವುದಾಗಿ ಮಾತು ಕೊಟ್ಟು ಮಾತಿಗೆ ತಪ್ಪಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಡಿದ್ದವು. ಬಿಜೆಪಿ 25 ಸ್ಥಾನಗಳನ್ನು ಗೆಲ್ಲು ಮೂಲಕ ದಾಖಲೆ ಬರೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಮಾತ್ರ ಗೆದ್ದಿವೆ. ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.












Click it and Unblock the Notifications