ಕರ್ನಾಟಕದ 28 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊರೊನಾವೈರಸ್ ಪ್ರಕರಣ
ಬೆಂಗಳೂರು, ಸೆಪ್ಟಂಬರ್ 6: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ರಾಜ್ಯದ 28 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.69ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.74ರಷ್ಟಿದೆ.
ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ 100ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 243 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದರೆ, ದಕ್ಷಿಣ ಕನ್ನಡದಲ್ಲಿ 258 ಹೊಸ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 243 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1239724ಕ್ಕೆ ಏರಿಕೆಯಾಗಿದೆ. ಎಂಟು ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16032ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7180 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿಯಲ್ಲಿ ಸ್ಪಷ್ಟವಾಗುತ್ತದೆ.

ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಏರಿಳಿತವನ್ನು ನೋಡಿ
ರಾಜ್ಯದಲ್ಲಿ ಒಂದು ದಿನದಲ್ಲಿ 973 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1071 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37426 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2956137ಕ್ಕೆ ಏರಿಕೆಯಾಗಿದೆ. ಒಟ್ಟು 2901299 ಸೋಂಕಿತರು ಗುಣಮುಖರಾಗಿದ್ದು. 17386 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 18,274 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,20,816 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,39,090 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 82,71,495 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,61,78,215 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,44,49,710 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 973 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 12 ಬೆಂಗಳೂರು 243, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 30, ಚಿತ್ರದುರ್ಗ 10, ದಕ್ಷಿಣ ಕನ್ನಡ 258, ದಾವಣಗೆರೆ 7, ಧಾರವಾಡ 6, ಗದಗ 0, ಹಾಸನ 62, ಹಾವೇರಿ 0, ಕಲಬುರಗಿ 8, ಕೊಡಗು 52, ಕೋಲಾರ 12, ಕೊಪ್ಪಳ 1, ಮಂಡ್ಯ 11, ಮೈಸೂರು 78, ರಾಯಚೂರು 1, ರಾಮನಗರ 1, ಶಿವಮೊಗ್ಗ 37, ತುಮಕೂರು 31, ಉಡುಪಿ 53, ಉತ್ತರ ಕನ್ನಡ 31, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,62,756 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,14,822 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,37,696 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,57,663 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,45,26,426 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 74,69,022 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,40,20,339 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,14,27,342 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications