ಎಎಪಿ ನಾಯಕ, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ: ಇಲ್ಲಿದೆ ಮಾಹಿತಿ
ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು, ಫೆಬ್ರವರಿ 28: ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ಕರ್ನಾಟಕದಲ್ಲಿ ನೆಲೆಕಂಡುಕೊಳ್ಳುತ್ತಿರುವ ಎಎಪಿ ಪಕ್ಷದ ಭವಿಷ್ಯಕ್ಕೆ ಹೊಡೆತ ನೀಡಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಪ್‌ಗೆ ಸೇರ್ಪಡೆಗೊಂಡಿದ್ದ ರಾವ್ ಅವರನ್ನು ಇತ್ತೀಚೆಗೆ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ವೇದಿಕೆ ರೂಪಿಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಭಾಸ್ಕರ್ ರಾವ್ ಅವರು ಎಎಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.

ಮಂಗಳವಾರ ಭಾಸ್ಕರ್ ರಾವ್ ಅವರು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದು, ಅವರ ರಾಜಕೀಯ ಭವಿಷ್ಯದ ಬಗ್ಗೆ ಊಹಾಪೋಹಗಳು ಹುಟ್ಟಿಕೊಂಡಿವೆ. ಅಶೋಕ್ ಸಾರಿಗೆ ಸಚಿವರಾಗಿದ್ದಾಗ ರಾವ್ ಅವರು 2008 ಮತ್ತು 2011 ರ ನಡುವೆ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರಾಗಿದ್ದರು. ಮೂಲಗಳ ಪ್ರಕಾರ, ರಾವ್ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ರಾಜ್ಯ ಎಎಪಿಯಲ್ಲಿ ಬೆಳವಣಿಗೆ ಇಲ್ಲ. ಅಲ್ಲಿ ಒಬ್ಬರ ಬೆಳವಣಿಗೆಯನ್ನು ನಿರಾಕರಿಸಲಾಗುತ್ತದೆ. ಈ ಕಾರಣಗಳಿಂದಾಗಿ ಭಾಸ್ಕರ್ ರಾವ್ ಅವರು ಎಎಪಿಯಿಂದ ಹೊರಬರುವ ಹಾದಿಯಲ್ಲಿದ್ದಾರೆ ಎಂದು ರಾವ್ ಅವರ ನಿಕಟ ಮೂಲಗಳು ದೃಢಪಡಿಸಿವೆ ಎಂದು 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಎಂಎಲ್‌ಇ ರವಿ ಸುಬ್ರಹ್ಮಣ್ಯ ವಿರುದ್ಧ ಭಾಸ್ಕರ್ ರಾವ್ ಅವರನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಕ್ಷವು ಮುಂದಾಗಿತ್ತು. ಎಂಎಲ್‌ಸಿ ಯು. ಬಿ. ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಭಾಸ್ಕರ್ ರಾವ್ ಅವರು 1990 ರ ಬ್ಯಾಚ್‌ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ರಾವ್ ಅವರು ಬೆಂಗಳೂರಿನಲ್ಲಿ ಜನಿಸಿದರು. ಈ ಹಿಂದೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರೂ (ADGP) ಆಗಿದ್ದರು. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.












Click it and Unblock the Notifications