ರಾಜ್ಯಪಾಲರು ಎಚ್‌ಡಿಕೆ, ನಿರಾಣಿ, ಜೊಲ್ಲೆಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ: ಮುಖ್ಯಮಂತ್ರಿ ಚಂದ್ರು
ಚಿಕ್ಕಮಗಳೂರು, ಆಗಸ್ಟ್ 21: ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಜನಾರ್ದನ ರೆಡ್ಡಿ ಸೇರಿದಂತೆ ಅನೇಕ ರಾಜಕಾರಣಿಗಳ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಬಾಕಿ ಇದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೂಡಲೇ ಈ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು. ಭ್ರಷ್ಟ ರಾಜಕಾರಣಿಗಳೆಲ್ಲರೂ ಜೈಲು ಸೇರಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಂದ್ರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ಇತ್ತೀಚಿನ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮ ಗುಲಾಮಗಿರಿಯ ಸಂಕೇತ. ಕೇಂದ್ರ ಬಿಜೆಪಿ ಸರ್ಕಾರವು ಬಿಜೆಪಿಯೇತರ ಎಲ್ಲ ಸರ್ಕಾರಗಳನ್ನು ತನ್ನ ಸರ್ವಾಧಿಕಾರ ಹಾಗೂ ರಾಕ್ಷಸ ಪ್ರವೃತ್ತಿಯಿಂದ ಕಿತ್ತು ಹಾಕಲು ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಚುನಾವಣೆಗಳು ಅನಿವಾರ್ಯ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ನಡೆಸದ ಕಾರಣ ಕೆಲವೇ ದಿನಗಳಲ್ಲಿ ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಳ್ಳುವ ಮೂಲಕ ಸರ್ಕಾರವು ಅನಿವಾರ್ಯವಾಗಿ ಚುನಾವಣೆಗಳನ್ನು ಮಾಡಬೇಕಾಗುತ್ತದೆ. ಆಮ್ ಆದ್ಮಿ ಪಕ್ಷವು ರಾಜ್ಯದ ಎಲ್ಲಾ ತಾಲ್ಲೂಕು ಹಂತಗಳಲ್ಲಿ ಸದೃಢವಾಗಿ ಬೆಳೆಯುತ್ತಿದ್ದು, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಭ್ರಷ್ಟ ಹಾಗೂ ಬಲಾಢ್ಯ ಪಕ್ಷಗಳ ವಿರುದ್ಧ ಸೆಣಸಾಡಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಣ್ಣ ರೈತರನ್ನು ಒಕ್ಕಲಿಬ್ಬಿಸುವ ದುಸ್ಸಾಹಸಕ್ಕೆ ಸರ್ಕಾರ ಮುಂದಾಗಿದೆ. ಇದು ನಡೆದಿದ್ದೇ ಆದರೆ ರಾಜ್ಯದಲ್ಲಿ ಬೃಹತ್ ಜನಾಂದೋಲನವನ್ನೇ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ. ಅನೇಕ ದಶಕಗಳಿಂದ ಇಲ್ಲಿನ ರೈತರುಗಳು ಅರಣ್ಯ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇದೀಗ ಏಕಾಏಕಿ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರವು ಮುಂದಾಗಿರುವುದು ಸರಿಯಲ್ಲ. ರೈತರ ವಿಚಾರದಲ್ಲಿ ಆಮ್ ಆದ್ಮಿ ಪಕ್ಷವು ಯಾವುದೇ ರೀತಿಯ ಹೋರಾಟಕ್ಕೂ ಸಹ ಸಿದ್ಧವಿರುತ್ತದೆ. ಸರ್ಕಾರ ಈ ರೀತಿಯ ದುಸ್ಸಾಹಸಗಳಿಗೆ ಕೈಹಾಕಬಾರದು ಎಂದೂ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳ ಪರಿಸ್ಥಿತಿಯನ್ನು ಅವಲೋಕಿಸಲು ತಜ್ಞರ ಸಮಿತಿಯನ್ನು ಈ ಕೂಡಲೇ ನೇಮಿಸಬೇಕು ಹಾಗೂ ಅವುಗಳನ್ನು ಅತ್ಯಂತ ಸುರಕ್ಷಿತವಾಗಿರಿಸಿಕೊಳ್ಳಲು ಸರ್ಕಾರ ಆದ್ಯತೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಚಂದ್ರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಲಿಂಗರಾಧ್ಯ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್, ಜಿಲ್ಲಾ ಮುಖಂಡರುಗಳಾದ ಡಾ.ಸುಂದರ ಗೌಡ, ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.












Click it and Unblock the Notifications