ಬಿಎಸ್‌ವೈ ವಿರುದ್ಧ ಎಫ್‌ಐಆರ್ : ಹೊಸ ತಿರುವು, ಪತ್ರ ಸ್ಫೋಟ!
ಬೆಂಗಳೂರು, ಅ. 19 : ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ದಾಖಲಾದ ಎಫ್‌ಐಆರ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿದ್ದರಾಮಯ್ಯ ಸರ್ಕಾರ ರಾಜಕೀಯ ದ್ವೇಷ ಸಾಧನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಭಾನುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಗಣಿ ಉಪಕಾರ್ಯದರ್ಶಿ ಹಾಗೂ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಅವರು ರಾಜ್ಯಪಾಲರಿಗೆ ಬರೆದಿರುವ ಪತ್ರ ಪ್ರಕರಣಕ್ಕೆ ತಿರುವು ನೀಡಿದೆ. 'ಇಬ್ಬರು ಎಸಿಬಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬೆದರಿಕೆ ಹಾಕಿದ್ದಾರೆ' ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

'ಯಡಿಯೂರಪ್ಪ ವಿರುದ್ಧ ಸುಳ್ಳು ಹೇಳಿಕೆ ನೀಡದಿದ್ದರೆ, ನನ್ನನ್ನು ಆರೋಪಿಯನ್ನಾಗಿ ಮಾಡಿ ಜೈಲಿಗೆ ಕಳಿಸುವುದಾಗಿ ಎಸಿಬಿ ಡಿವೈಎಸ್‌ಪಿ ಬಾಲರಾಜ್, ಆಂಥೋಣಿ ಬೆದರಿಕೆ ಹಾಕಿದ್ದಾರೆ' ಎಂದು ಬಸವರಾಜೇಂದ್ರ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.
ಬಸವರಾಜೇಂದ್ರ ಅವರು ರಾಜ್ಯಪಾಲರಿಗೆ ಬರೆದಿರುವ ಪತ್ರ ಮಾಧ್ಯಮಗಳ ಮೂಲಕ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ಹೋರಾಟ ಆರಂಭಿಸುವುದಾಗಿ ಹೇಳಿಕೆ ನೀಡಿದೆ. ಸಿದ್ದರಾಮಯ್ಯ ಸರ್ಕಾರ ಎಸಿಬಿಯನ್ನು ರಾಜಕೀಯ ದ್ವೇಷ ಸಾಧನೆಗಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಎಸಿಬಿಯನ್ನು ದುರುಪಯೋಗ ಪಡಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾನುವಾರ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.
ಈಗಾಗಲೇ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧ ಎಸಿಬಿ ದಾಖಲು ಮಾಡಿರುವ ಎರಡು ಎಫ್‌ಐಆರ್ ರದ್ದು ಮಾಡುವಂತೆ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 21ರಂದು ಈ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿದೆ.












Click it and Unblock the Notifications