ಧರಣಿ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ರಾಜ್ಯದ ಹಲವೆಡೆ ರೈತರು, ಹೋರಾಟಗಾರರ ಪ್ರತಿಭಟನೆ
ಬೆಂಗಳೂರು/ ಶಿವಮೊಗ್ಗ, ಜೂನ್. 02: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ದೇಶದ ಹಲವೆಡೆಯಿಂದ ಬೆಂಬಲ ವ್ಯಕ್ತವಾಗಿದೆ. ಇದೇ ರೀತಿ ರಾಜ್ಯದಲ್ಲಿಯೂ ಹೋರಾಟಗಾರರು, ರೈತರು ಮತ್ತು ವಿದ್ಯಾರ್ಥಿಗಳು ಬೆಂಬಲ ನೀಡಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಶಿವಮೊಗ್ಗ ಘಟಕವು ಗುರುವಾರ, ಜೂನ್ 1 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿತು. ದೆಹಲಿಯಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನಾಕಾರರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಕಳೆದ 40 ದಿನಗಳಿಂದ ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಕರೆಗೆ ಸ್ಪಂದಿಸಿ ಪ್ರತಿಭಟನೆ ನಡೆಸಲಾಯಿತು. ಡಿಸಿ ಕಚೇರಿ ಎದುರು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

"ಕುಸ್ತಿಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸುತ್ತಿರುವುದು ಅತ್ಯಂತ ಆಘಾತಕಾರಿ ಸಂಗತಿ. ದೇಶವೇ ತಲೆ ತಗ್ಗಿಸುವಂತಹ ಘಟನೆ. ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕೆಂದು ಮಾತ್ರ ಕೇಳುತ್ತಿದ್ದಾರೆ. ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಸಂಸದನನ್ನು ರಕ್ಷಿಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕುಸ್ತಿಪಟುಗಳಿಗೆ ರಕ್ಷಣೆ ಒದಗಿಸಬೇಕಿದ್ದ ಬಿಜೆಪಿ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ಕ್ರೀಡಾಪಟುಗಳ ಮೇಲೆ ಧಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರ ಮೇಲೇ ಕಿರುಕುಳ ನಡೆದರೆ, ಸಾಮಾನ್ಯ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ" ಎಂದು ಕಿಡಿಕಾರಿದ್ದಾರೆ.
ಇನ್ನು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ, ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ 'ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ - ಕರ್ನಾಟಕ' ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗಿದೆ.












Click it and Unblock the Notifications