ಬಂಡೀಪುರ, ನಾಗರಹೊಳೆಯಲ್ಲಿ ಹಂತಹಂತವಾಗಿ ಸಫಾರಿ ಪುನಾರಂಭ: ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು: ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕಳೆದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು.

ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. 1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿ ಇತ್ತು. ಇಂದು ಸುಮಾರು 175-200 ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು 10 ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ 900 ಚದರ ಕಿಲೋ ಮೀಟರ್ ಕಾಡಿನಲ್ಲಿ 2 ಪಟ್ಟು ಹುಲಿಗಳಿವೆ ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ, ಸಫಾರಿಗೆ ಕೇವಲ ಶೇ.8ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ, ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.
ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಸಫಾರಿ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆ ಆಗಿದೆ, ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿದೆ ಎಂದರೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಹಂತಹಂತವಾಗಿ ಸಫಾರಿ ಆರಂಭಿಸುವುದು ಸೂಕ್ತ ಎಂದು ತಿಳಿಸಿದರು. ಸಭೆಯಲ್ಲಿ ಇದೇ ಅಭಿಪ್ರಾಯ ವ್ಯಕ್ತವಾಯಿತು. ಎಲ್ಲರ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಯವರು ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿಗೆ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಸೂಚಿಸಿದರು.
ವನ್ಯಜೀವಿ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕೆ ಸೂಚನೆ
ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂಚೂಣಿ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಅರಣ್ಯ ಇಲಾಖೆ ದೇಶಕ್ಕೇ ಮಾದರಿಯಾಗಿದೆ ಎಂಬುದು ಅತಿಶಯೋಕ್ತಿಯಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕೊಡಗಿನಲ್ಲಿ ಇಂದು ಆನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಮಾನವ-ವನ್ಯಜೀವಿ ಸಂಘರ್ಷ ದೊಡ್ಡ ಸವಾಲಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸಲು ತಜ್ಞರ ಸಲಹೆ ಪಡೆದು ಎಲ್ಲರೂ ಪ್ರಾಮಾಣಿಕವಾಗಿ ಮತ್ತು ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಮೂಲ್ಯವಾದ ಮಾನವ ಜೀವಕ್ಕೂ ತೊಂದರೆ ಆಗದಂತೆ ಹಾಗೂ ವನ್ಯಜೀವಿಗಳಿಗೂ ಹಾನಿ ಆಗದಂತೆ ಮತ್ತು ವನ್ಯಜೀವಿಗಳಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆ ಹಾನಿ ಆಗದಂತೆ ಅಧಿಕಾರಿಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಸೂಚಿಸಿದರು.ತಾವು ಸಚಿವರಾದ ಬಳಿಕ ಅರಣ್ಯ ಒತ್ತುವರಿ ತೆರವಿಗೆ ಹಾಗೂ ಪ್ರಕೃತಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿದ್ದು, ನಿಮ್ಮೆಲ್ಲರ ಸಹಕಾರದಿಂದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ. ವೃಕ್ಷ ಸಂರಕ್ಷಣೆ, ಸಂವರ್ಧನೆ ಆಗುತ್ತಿದೆ ಎಂದು ಸಂತೃಪ್ತಿ ವ್ಯಕ್ತಪಡಿಸಿದರು.












Click it and Unblock the Notifications