ವಕೀಲ ಅಮಿತ್ ಕೇಶವಮೂರ್ತಿ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ನವೆಂಬರ್ 17: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ನೆಲಮಂಗಲದ ಖ್ಯಾತ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್ ಕೇಶವಮೂರ್ತಿ ಕೊಲೆ ಪ್ರಕರಣದಲ್ಲಿ ಆರೋಪಿ ರಾಜೇಶ್ ಗೌಡಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಿಂದಾಗಿ ಆರೋಪಿ ಜೀವಾವಧಿ ಶಿಕ್ಷೆಯನ್ನು ಎದುರಿಸಲೇಬೇಕಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಹೊಸಮನಿ ಪುಂಡಲೀಕ ಅವರು ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿದ್ದ ನ್ಯಾಯಾಲಯ ಇದೀಗ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದು, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ.

ಆರೋಪಿಗೆ ಭಾರತೀಯ ದಂಡ ಸಂಹಿತೆ-1860ರ ಕಲಂ 302ರ ಅಡಿಯಲ್ಲಿ ಜೀವಾವಧಿ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಕಲಂ 30ರ ಅಡಿಯಲ್ಲಿ 4 ತಿಂಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಲಾಗಿದೆ. 1 ಲಕ್ಷ ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ್ದ ಸರ್ಕಲ್ ಇನ್‌ಸ್ಪೆಕ್ಟರ್ ಜಿ. ಪ್ರವೀಣ್ ಬಾಬು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಿಶೇಷ ಪ್ರಾಸಿಕ್ಯೂಟರ್ ಆಗಿ ಹಿರಿಯ ವಕೀಲ ಸಿ. ಎಚ್. ಹನುಮಂತರಾಯ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಚಾರ್ಯ ಇಂಜಿನಿಯರಿಂಗ್ ಕಾಲೇಜು ಬಳಿ 2017ರ ಜನವರಿ 13ರಂದು ಅಮಿತ್ ಕೇಶವಮೂರ್ತಿ ಆರೋಪಿ ರಾಜೇಶ್ ಪತ್ನಿ ಪಿಡಿಒ ಶ್ರುತಿಗೌಡ ಅವರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಕುಳಿತಿದ್ದರು.
ಶ್ರುತಿ ಗೌಡ ಅವರಿಗೆ ಸೇರಿದ ಈ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದ ರಾಜೇಶ್, ಕಾರಿನ ಬಾಗಿಲು ತೆರೆದು ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಅಮಿತ್ ಮೇಲೆ ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು. ಶ್ರುತಿ ಗೌಡ ಅವರ ನಡೆ ಮತ್ತು ಚಟುವಟಿಕೆಗಳ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದ ರಾಜೇಶ್, ಶ್ರುತಿ ಬಳಸುವ ಕಾರಿಗೆ ಜಿಪಿಎಸ್ ಅಳವಡಿಸಿ ಅದರ ಮುಖಾಂತರ ಅವರಿದ್ದ ಸ್ಥಳಕ್ಕೆ ಹಿಂಬಾಲಿಸಿಕೊಂಡು ಬಂದಿದ್ದರು.
ಅಮಿತ್ ಮೃತಪಟ್ಟ ಸುದ್ದಿ ತಿಳಿದ ನಂತರ ಶ್ರುತಿಗೌಡ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ. ಈ ಪ್ರಕರಣದ ಮತ್ತೊಬ್ಬ ಆರೋಪಿಯಾಗಿದ್ದ ರಾಜೇಶ್ ತಂದೆ ಗೋಪಾಲಕೃಷ್ಣ ವಿಚಾರಣೆಗೂ ಮುನ್ನವೇ ಸಾವನ್ನಪ್ಪಿದ್ದರು.
ಅಮಿತ್ ಕೇಶವಮೂರ್ತಿ ಅಮೆರಿಕದಲ್ಲಿ ಎಲ್ಎಲ್ಎಂ ಸ್ನಾತಕೋತ್ತರ ಪದವಿ ಪಡೆದಿದ್ದರು. ನೆಲಮಂಗಲ ಮತ್ತು ಬೆಂಗಳೂರು ನಗರದಲ್ಲಿ ವಕೀಲಿಕೆ ನಡೆಸುತ್ತಿದ್ದರು. ರಾಜ್ಯಾದ್ಯಂತ ಈ ಕೊಲೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು.












Click it and Unblock the Notifications