ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಡೌಟ್: ಹೊಸ ಬಾಂಬ್ ಸಿಡಿಸಿದ ಸಿ ಪಿ ಯೋಗೇಶ್ವರ್
ರಾಮನಗರ, ಅಕ್ಟೋಬರ್ 2: ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದೆ. ಸಂಕ್ರಾಂತಿ ಬಳಿಕ ಈ ಕಾಂಗ್ರೆಸ್ ಸರ್ಕಾರ ಇರೋದು ಡೌಟ್ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಸೋಮವಾರ ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಕಾಂಗ್ರೆಸ್ ನಲ್ಲಿ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡ್ತಿದ್ದಾರೆ ಎಂದು ಹೇಳಿದರು.

ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ, ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗ್ತಿಲ್ಲ. ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲ ಅಂತ ಹೇಳಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ.
ಅವರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ. ಹಾಗಾಗಿ ಇದರ ಪರಿಣಾಮವನ್ನ ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡ್ತೀರಾ ಎಂದು ಹೇಳಿದರು.
ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿ ಕೆ ಶಿವಕುಮಾರ್ ಅವರ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ, ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಧಮನಕಾರಿ ಆಡಳಿತ ಮಾಡುತ್ತಿದೆ. ಉಪಮುಖ್ಯಮಂತ್ರಿಯಾದ ಡಿ ಕೆ ಶಿವಕುಮಾರ್ ಆಪರೇಷನ್ ಹಸ್ತ ಅಂತ ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅವರನ್ನ ಎದುರಿಸಲು ಹೊಂದಾಣಿಕೆ ಆಗಿದೆ, ಇದರಿಂದ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲ ಆಗಲಿದೆ ಎಂದು ಹೇಳಿದರು.
ಮೈತ್ರಿ ಬಗ್ಗೆ ನಿನ್ನೆ ಜೆಡಿಎಸ್ ಸರ್ವಾನುಮತದ ಒಪ್ಪಿಗೆ ಪಡೆದಿದೆ. ಮುಂದಿನವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ, ಮೈತ್ರಿ ಬಗ್ಗೆ ಬೂತ್ ಮಟ್ಟದ ನಾಯಕರು, ಕಾರ್ಯಕರ್ತರಿಗೆ ಮನವರಿಕೆ ಮಾಡುತೇವೆ. ಬಳಿಕ ಜೆಡಿಎಸ್ ನಾಯಕರ ಜೊತೆ ಮತ್ತೊಂದು ಸಭೆ ಮಾಡುತ್ತೇವೆ ಎಂದು ಸಿ ಪಿ ಯೋಗೇಶ್ವರ್ ಹೇಳಿದರು.
ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿ, ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಗೆ ಬಿಟ್ಟಿದ್ದು, ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ಪಕ್ಷದ ವರಿಷ್ಠರು ಏನೇ ತೀರ್ಮಾನ ಮಾಡಿದ್ರೂ ಬದ್ಧ.ಬಿಜೆಪಿಗೆ ಅವಕಾಶ ಸಿಕ್ಕಿದ್ರೆ, ನನ್ನನ್ನ ಚುನಾವಣೆಗೆ ನಿಲ್ಲಲು ಸೂಚಿಸಿದ್ರೆ ನಾನು ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಜೆಡಿಎಸ್ ಗೆ ಅವಕಾಶ ನೀಡಿದ್ರೆ ಅವರಿಗೆ ಸಪೋರ್ಟ್ ಮಾಡುತ್ತೇವೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ












Click it and Unblock the Notifications