ಸಿದ್ದರಾಮಯ್ಯ ಭೇಟಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!
ಬೆಂಗಳೂರು, ಮಾರ್ಚ್ 23: ಹನಿಟ್ರ್ಯಾಪ್ ಪ್ರಕರಣ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇಂತಹ ಹೊತ್ತಿನಲ್ಲಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಕುರಿತು ಈಗಾಗಲೇ ಹೈಕಮಾಂಡ್ ನಾಯಕರು ಮಾಹಿತಿ ಸಂಗ್ರಹಣೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಕೆಲವು ಸಚಿವರು ಹನಿಟ್ರ್ಯಾಪ್ ವಿಚಾರದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಸಹ ತಯಾರಿ ನಡೆಸಿದ್ದಾರೆ.
ಭಾನುವಾರ ಮಲ್ಲಿಕಾರ್ಜುನ ಖರ್ಗೆ ಪುತ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದರು. ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ ಕಾಲು ನೋವಿನ ಕುರಿತು ಮಾಹಿತಿಯನ್ನು ಪಡೆದರು.

ಹನಿಟ್ರ್ಯಾಪ್ ಪ್ರಕರಣದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸುಮಾರು 45 ನಿಮಿಷಗಳ ಕಾಲ ಸಿದ್ದರಾಮಯ್ಯ, ಖರ್ಗೆ ಮಾತುಕತೆಯನ್ನು ನಡೆಸಿದ್ದಾರೆ.
ಹಲವು ವಿಚಾರಗಳ ಕುರಿತು ಚರ್ಚೆ: ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೆಹಲಿ ಭೇಟಿ, ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಈ ಭೇಟಿ ಬಳಿಕ ಖರ್ಗೆ ಅಥವ ಸಿದ್ದರಾಮಯ್ಯ ಯಾರೂ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಮಧುಗಿರಿ ಶಾಸಕ, ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮನ್ನು ಹನಿಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿದೆ ಎಂದು ಬಜೆಟ್ ಅಧಿವೇಶನದ ಸಮಯದಲ್ಲಿ ಹೇಳಿಕೆ ನೀಡಿ ರಾಜ್ಯ ರಾಜಕೀಯದಲ್ಲಿ ಸಂಚಲ ಉಂಟು ಮಾಡಿದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ವಿಧಾನಸಭೆ ಕಲಾಪದ ಕೊನೆಯ ದಿನವಾದ ಶುಕ್ರವಾರ ಹೈಡ್ರಾಮ ಮಾಡಿದ್ದರು.
ಹನಿಟ್ರ್ಯಾಪ್ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದರು. ಆದರೆ ಬಿಜೆಪಿ ಸದಸ್ಯರು ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿತ್ತು.

ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮನ್ನು ಹನಿಟ್ರ್ಯಾಪ್ ಮಾಡುವ ಪ್ರಯತ್ನದ ಕುರಿತು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಅಲ್ಲದೇ ಬಳಿಕ ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಹೈಕಮಾಂಡ್ ನಾಯಕರಿಗೆ ಸಚಿವರು ಸಾಕ್ಷ್ಯಗಳನ್ನು ಸಹ ಒದಗಿಸುವ ಸಾಧ್ಯತೆ ಇದೆ.
ಹನಿಟ್ರ್ಯಾಪ್ ಮಾಡುವ ಪ್ರಯತ್ನದ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಳಿ ಈಗಾಗಲೇ ಹೈಕಮಾಂಡ್ ನಾಯಕರು ಮಾಹಿತಿಯನ್ನು ಪಡೆದಿದ್ದಾರೆ.












Click it and Unblock the Notifications