Siddaramaiah: ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಜನವರಿ 28: ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟು ಬದ್ಧವಾಗಿದ್ದು, ಕನ್ನಡಿಗರು ಭಾಷಾಭಿಮಾನವನ್ನು ಬೆಳೆಸಿಕೊಳ್ಳುವ ಮೂಲಕ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕೆಂದರು ಹೇಳಿದರು.
ಸೋಮವಾರ ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ವಾಣಿಯಂತೆ ಕನ್ನಡಿಗರಾದ ನಾವು ಕನ್ನಡವನ್ನು ಹೆಚ್ಚೆಚ್ಚು ಬಳಸಿ , ಬೆಳೆಸಿ ಬೆಳಗಬೇಕಾಗಿದೆ. ಇತರ ಭಾಷಿಕರ ಜೊತೆಗೆ ಕನ್ನಡದಲ್ಲಿಯೇ ಸಂವಹನ ನಡೆಸುವ ಮೂಲಕ ಕನ್ನಡ ಕಲಿಯಬೇಕಾದ ಅನಿವಾರ್ಯತೆ ಅವರಲ್ಲಿ ಸೃಷ್ಠಿಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ. ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.
ಇತರೆ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು. ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಕರೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ದೇಶದ ಯಾವುದೇ ರಾಜ್ಯದಲ್ಲಿ ಇರದ ನಾಡಗೀತೆ, ನಾಡಧ್ವಜ ನಮ್ಮ ರಾಜ್ಯದಲ್ಲಿ ಮಾತ್ರವಿದೆ. ನಮ್ಮ ಭಾಷೆಯನ್ನು ಮಾತೃಭಾಷೆ ಎನ್ನುತ್ತೇವೆ. ನಮ್ಮ ನಾಡಿನ ತಾಯಿ ಭುವನೇಶ್ವರಿಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೂಲಕ ಕನ್ನಡಕ್ಕೆ ಹಾಗೂ ಕನ್ನಡ ತಾಯಿಗೆ ಗೌರವ ಸಲ್ಲಿಸಿದಂತಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್.ಎಸ್ ತಂಗಡಗಿ ಮಾತನಾಡಿ, ಕನ್ನಡ ನಾಡಿನ ಅಸ್ಮಿತೆಯಾದ ತಾಯಿ ಭುನನೇಶ್ವರಿ ಪ್ರತಿಮೆ ಉದ್ಘಾಟನೆಯಾದದ್ದು ಒಂದು ಐತಿಹಾಸಿಕ ಕ್ಷಣ. ನಮ್ಮ ಸರ್ಕಾರ ಎಂದೆಂದಿಗೂ ಕನ್ನಡಿಗರ ಪರವಾಗಿದೆ. ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿಯ ಪ್ರಶ್ನೆಯಿಲ್ಲ. ಕರ್ನಾಟಕದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವರ್ಷವಿಡೀ ಕನ್ನಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿರಬೇಕು ಎನ್ನುವ ಐತಿಹಾಸಿಕ ಕಾನೂನು ತಂದ ಹಿನ್ನೆಲೆಯಲ್ಲಿ ಕೈಗಾರಿಕೆ, ಅಂಗಡಿ ಮುಂಗಟ್ಟುಗಳು, ಹಾಗೂ ವಾಣಿಜ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕನ್ನಡ ಇಂದು ರಾರಾಜಿಸುವಂತಾಗಿದೆ . ಗೋವಾದಲ್ಲಿ ಕನ್ನಡ ಭವನ ನಿರ್ಮಿಸುವ ಸಲುವಾಗಿ ಅಲ್ಲಿನ ಸರ್ಕಾರದೊಂದಿಗೆ ವ್ಯವಹರಿಸಿ ಸ್ಥಳ ಗುರುತಿಸಲಾಗಿದ್ದು ಅದಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.












Click it and Unblock the Notifications