ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ: ಸಿಐಡಿ ತನಿಖೆ
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆಯನ್ನು ನಡೆಸಲಾಗುತ್ತದೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಸ್ಐ ಹುದ್ದೆಗೆ ಈಗಾಗಲೇ ಪರೀಕ್ಷೆ ನಡೆದಿದೆ. ಹಾಗೆಯೇ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯೂ ಪ್ರಕಟವಾಗಿದೆ. ಆದರೆ ಈ ನಡುವೆ ಈ ಹುದ್ದೆಯ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲು ಮಾಡಲಾಗಿದೆ. ಕಲಬುರಗಿಯ ಜ್ಞಾನಜ್ಯೋತಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ಸಂಶಯವಿದೆ ಎಂದು ತಿಳಿಸಿದರು.

ಸಿಐಡಿ ತನಿಖೆ ಆರಂಭ
ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈಗಾಗಲೇ ಸಿಐಡಿ ತನಿಖೆಯು ಕಲಬುರಗಿಗೆ ತಲುಪಿದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಪಿಎಸ್ಐ ಅಕ್ರಮ ಬಗ್ಗೆ ಬಹಿರಂಗ
545 ಪಿಎಸ್‌ಐ-ಸಿವಿಲ್ ನೇಮಕಾತಿ ಪರೀಕ್ಷೆ ಹಾಗೂ ಆಯ್ಕೆ ಪಟ್ಟಿಯಲ್ಲಿ ಅಕ್ರಮದ, ಹಗರಣದ ಆರೋಪಗಳು ಒಂದೊಂದಾಗಿ ಬಯಲಿಗೆ ಬಂದಿದ್ದವು. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನೊಂದ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದರು. ಇದೇ ವೇಳೆ ಅಕ್ರಮದ ಕುರಿತ ಅನುಮಾನಸ್ಪದ ಅಂಶಗಳುಳ್ಳ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಪಿಎಸ್ಐ ನೇಮಕಾತಿ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ (ಕಲಂ 371 ಜೆ) ಅಭ್ಯರ್ಥಿಗಳಿಗೆ ಮೀಸಲಾತಿ ವಿಚಾರದಲ್ಲಿ ಅನ್ಯಾಯ ಮಾಡಲಾಗಿದೆ. ಅಲ್ಲದೇ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ ನೊಂದ ಅಭ್ಯರ್ಥಿಯೊಬ್ಬರು ಯಾದಗಿರಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ನೀಡಿ, ತನಿಖೆಗೆ ಆಗ್ರಹಿಸಿದ್ದರು. ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇಓ ಫೆಬ್ರವರಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.












Click it and Unblock the Notifications