ಅನ್ನಭಾಗ್ಯ ವಿವಾದ: ಕೇಂದ್ರದ ವಿರುದ್ಧ ಪ್ರತಿಭಟಿಸಲು ಸಜ್ಜಾದ ಕಾಂಗ್ರೆಸ್- ಜಿಲ್ಲಾ ಕೇಂದ್ರಗಳಲ್ಲಿ ಧರಣಿಗೆ ಪ್ಲ್ಯಾನ್- ದಿನಾಂಕ
ಬೆಂಗಳೂರು, ಜೂನ್ 16: ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಗೆ ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗಂಭೀರ ಆರೋಪ ಮಾಡಿದೆ. ಈ ವಿಚಾರವೀಗ ರಾಜಕಾರಣದಲ್ಲಿ ಭಾರೀ ವಿವಾದವನ್ನೇ ಹುಟ್ಟುಹಾಕಿದೆ.
ಈ ಕುರಿತು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 'ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಜೂನ್ 20ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ' ಎಂದು ಹೇಳಿದ್ದಾರೆ.

ಈ ಸಂಬಂಧ ಕಾಂಗ್ರೆಸ್‌ನ ಜಿಲ್ಲಾ ಘಟಕಗಳಿಗೆ ಸೂಚನೆ ತಲುಪಿಸಲಾಗುತ್ತಿದೆ. ಸ್ಥಳೀಯ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ದಿಟ್ಟ ಸಂದೇಶವನ್ನು ತಲುಪಿಸಬೇಕು ಎಂದೂ ತಿಳಿಸಿದ್ದಾರೆ.
7 ಲಕ್ಷ ಟನ್ ಅಕ್ಕಿ ದಾಸ್ತಾನಿದೆ ಎಂದು ಹೇಳಿದ್ದ ಕೇಂದ್ರ ಬಿಜೆಪಿ ಸರ್ಕಾರ ಮರುದಿನವೇ ತನ್ನ ಮಾತು ಬದಲಿಸಿದೆ. ಈ ಮೂಲಕ ತಮಗೆ ಮತ ಹಾಕದ ಬಡ ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ತೆಲಂಗಾಣ, ಛತ್ತೀಸ್‌ಗಢ ಮೊದಲಾದ ರಾಜ್ಯಗಳೊಂದಿಗೆ ಈಗಾಗಲೇ ಮಾತುಕತೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ
ಈ ವಿಚಾರವಾಗಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, 'ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ' ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲ ಬಿಡದಂತೆ ಕೇಂದ್ರ BJP ಸರ್ಕಾರದ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ. ಈಗಾಗಲೇ ರಾಜ್ಯದಲ್ಲಿ BJP 63 ಮತ್ತೊಂದು ಸೀಟಿಗೆ ತೃಪ್ತಿಪಡಬೇಕಾಗಿದೆ. ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ' ಎಂದು ಟೀಕಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಈ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, 'ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ' ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಎಫ್.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ತಿಳಿಸಿದ್ದಾರೆ.
ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಇಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಿದ್ದಾರೆ.

ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications