ಬೆಂಗಳೂರು ಕಂಬಳ ; ಅನುಷ್ಕಾ ಶೆಟ್ಟಿ, ಐಶ್ವರ್ಯ ರೈ ಭಾಗಿ; 1 ಕೋಟಿ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 15: ರಾಜ್ಯ ರಾಜಧಾನಿ ಬೆಂಗಳೂರಿ=ನಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.
ಹೌದು, ನವೆಂಬರ್ 25 ಹಾಗೂ 26 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ್ದಾರೆ. ಬೆಂಗಳೂರು ಕಂಬಳ ಐತಿಹಾಸಿದ ಕಾರ್ಯಕ್ರಮವಾಗಿದೆ ಎಂದು ಹೇಳಿದ್ದಾರೆ.

ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಟಿ ಭಾಷೆ ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನವೆಂಬರ್ 23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಆಶೋಕ್ ರೈ ತಿಳಿಸಿದರು.
ಇನ್ನೂ ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಅವರು ಹೇಳಿದ್ದು, ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಇದೇ ಮೊದಲ ಬಾರಿಗೆ ಬೆಂಗಳೂರು ಕಂಬಳ ನಡೆಯುತ್ತಿದ್ದು, ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗದ ಕಲಾವಿದರು ಹಾಗೂ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.












Click it and Unblock the Notifications