ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ ಆಧಾರದ ಮೇಲೆ ಗುರುವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಜ್ಞಾನೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣವನ್ನು ಶುಕ್ರವಾರ ಘಟನೆ ಸಂಭವಿಸಿದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ವರ್ಗಾಯಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆಕ್ಷೇಪಾರ್ಹ ಹೇಳಿಕೆ
ಆಗಸ್ಟ್ 1 ರಂದು ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ, ಖರ್ಗೆ ಅವರ ಮೈಬಣ್ಣ ಮತ್ತು ಉತ್ತರ ಕರ್ನಾಟಕ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಗುರಿಯಾಗಿಸಿ ಜ್ಞಾನೇಂದ್ರ, ಈ ಭಾಗದ ಜನರಿಗೆ ಮರ, ಗಿಡಗಳ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಅಂತಹವರನ್ನು ಅರಣ್ಯ ಮಂತ್ರಿಯನ್ನಾಗಿ ಮಾಡಲಾಗಿದೆ. ಅವರಿಗೆ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ವಾಸಿಸುವ ಜನರ ಸಮಸ್ಯೆಗಳ ಬಗ್ಗೆ ಮಾಹಿತಿ ಇರಲ್ಲ ಎಂದು ಹೇಳಿದ್ದರು.
"ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು, ಅರಣ್ಯ ಸಚಿವರು ಅರಣ್ಯವಿಲ್ಲದ ಆ ಪ್ರದೇಶದಿಂದ ಬಂದಿರುವುದು ನಮ್ಮ ದೌರ್ಭಾಗ್ಯ, ಅವರು ಬಿಸಿಲಿನಲ್ಲಿ ಸುಟ್ಟು ಕರಕಲಾಗಿದ್ದಾರೆ. ಖರ್ಗೆ ಅವರನ್ನು ನೋಡಿದರೆ ತಿಳಿಯುತ್ತದೆ" ಎಂದು ಜ್ಞಾನೇಂದ್ರ ಹೇಳಿದ್ದರು.
ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ
ಆರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಂದ್ರ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಜ್ಞಾನೇಂದ್ರ ಅವರ ಹೇಳಿಕೆಯನ್ನು ಖಂಡಿಸಿದ್ದರು.
ತಮ್ಮ ಹೇಳಿಕೆ ವಿವಾದವಾದ ಬೆನ್ನಲ್ಲೇ ಅವರು ಕ್ಷಮೆ ಕೇಳಿದ್ದರು. ಯಾರನ್ನೂ ನೋಯಿಸುವ ಉದ್ದೇಶದಿಂದ ಹೇಳಿಕೆ ಕೊಟ್ಟಿಲ್ಲ ಎಂದು ಹೇಳಿದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ, ಅವರನ್ನು ಟೀಕಿಸುವಷ್ಟು ದೊಡ್ಡವನೆಂದು ನನಗನಿಸುವುದಿಲ್ಲ, ಅವರ ಹಿರಿತನ ಮತ್ತು ಅನುಭವಕ್ಕೆ ಗೌರವ ಕೊಟ್ಟು ಮಾತನಾಡುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅಥವಾ ಖಂಡ್ರೆ ಅವರನ್ನು ನೋಯಿಸುವುದು ನನ್ನ ಉದ್ದೇಶವಲ್ಲ. ಯಾರ ಭಾವನೆಗಳಿಗೂ ಧಕ್ಕೆ ತರುವುದು ನನ್ನ ಉದ್ದೇಶವಾಗಿರಲಿಲ್ಲ, ಆದರೆ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದರು.












Click it and Unblock the Notifications