ಭವಾನಿ ರೇವಣ್ಣ: ಹೈಕೋರ್ಟ್‌ನಲ್ಲಿ ಸಿಗಲಿದೆಯೇ ಜಾಮೀನು?
ಬೆಂಗಳೂರು, ಜೂನ್ 04: ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾಜಿ ಸಚಿವ ಎಚ್. ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದು ಒಂದೆರಡು ದಿನಗಳಲ್ಲಿ ವಿಚಾರಣೆಗೆ ಬರಲಿದೆ.

ಅರ್ಜಿಯಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಅರ್ಜಿದಾರರಿಗೆ ಬಂಧನ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ವಿಚಾರಣೆಗೆ ಒಳಗಾದರೆ ಬಂಧಿಸುವ ಸಾಧ್ಯತೆಯಿದೆ. ಆದ್ದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಕರಣದ ಹಿನ್ನೆಲೆ: ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ. ಆರ್. ನಗರ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್. ಡಿ. ರೇವಣ್ಣ ಮೊದಲ, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.
ಪ್ರಕರಣದಲ್ಲಿ ತಮ್ಮನ್ನು ಆರೋಪಿಯನ್ನಾಗಿ ಮಾಡಿಲ್ಲ, ಎಫ್ಐಆರ್‌ನಲ್ಲೂ ಹೆಸರಿಲ್ಲ. ಆದರೂ ನನ್ನನ್ನು ಗುರಿ ಮಾಡಲಾಗಿದೆ ಎಂದು ಭವಾನಿ ರೇವಣ್ಣ ಅರ್ಜಿಯಲ್ಲಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ. ಅಲ್ಲದೇ, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ನೋಟಿಸ್ ಜಾರಿ ಮಾಡಿದ್ದರೂ, ಹಾಜರಾಗಿಲ್ಲ.
ಭವಾನಿ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕಳೆದ ಶುಕ್ರವಾರ ತಿರಸ್ಕಾರವಾಗಿತ್ತು. ಬಳಿಕ ಎಸ್‌ಐಟಿ ಭವಾನಿ ರೇವಣ್ಣಗಾಗಿ ಹುಡುಕಾಟವನ್ನು ಆರಂಭಿಸಿದೆ. ಶನಿವಾರ ಹೊಳೆನರಸೀಪುರ ನಿವಾಸಕ್ಕೆ ಭವಾನಿ ರೇವಣ್ಣ ವಿಚಾರಣೆಗಾಗಿ ಎಸ್‌ಐಟಿ ಪೊಲೀಸರು ಆಗಮಿಸಿದ್ದರು. ಆದರೆ ಸಂಜೆಯ ತನಕ ಕಾದರೂ ಸಹ ಭವಾನಿ ರೇವಣ್ಣ ವಿಚಾರಣೆಗೆ ಆಗಮಿಸಲಿಲ್ಲ.












Click it and Unblock the Notifications