ಕರ್ನಾಟಕ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್, ಮಾಸಿಕ ಗೌರವ ವೇತನ ಎಷ್ಟು ಹೆಚ್ಚಳ ?
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಮಾಸಿಕ ಗೌರವಧನವನ್ನು ಹೆಚ್ಚಳ ಮಾಡಿದೆ. ಆದರೆ, ಮಾಸಿಕ ಗೌರವ ಧನ ಹೆಚ್ಚಳ ಮಾಡಿದ್ದರೂ ಸಹ ಆಶಾ ಕಾರ್ಯಕರ್ತೆಯರ ಮೂಗಿಗೆ ಬೆಣ್ಣೆ ಸವರಿದಂತೆ ಆಗಿದೆ.
ಕಳೆದ 12 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದ ಕರ್ನಾಟಕದ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಕೊನೆಗೂ ಕರ್ನಾಟಕ ಸರ್ಕಾರವು ಸ್ಪಂದಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ಕೊನೆಗೂ ಗುಡ್‌ನ್ಯೂಸ್ ಕೊಟ್ಟಿದೆ. ಆದರೆ, ಈ ಗುಡ್‌ನ್ಯೂಸ್ ಪೂರ್ಣ ಪ್ರಮಾಣದಲ್ಲ. ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದ್ದು, ಈ ಪರಿಷ್ಕೃತ ದರವು ಜನವರಿ 1, 2027ರಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಡಿ.ಕೆ ಶಿವಕುಮಾರ್ ಪೋಸ್ಟ್
ಇನ್ನು ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಜನರ ಆರೋಗ್ಯದ ಕಾಳಜಿ ವಹಿಸುವ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದೆ. ಆಶಾ ಕಾರ್ಯಕರ್ತೆಯರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
12 ದಿನಗಳ ಹೋರಾಟಕ್ಕೆ ಕೊನೆಗೂ ಸ್ಪಂದಿಸಿದ ಕರ್ನಾಟಕ ಸರ್ಕಾರ
ಇನ್ನು ಆಶಾ ಕಾರ್ಯಕರ್ತೆಯರು ತಮ್ಮ ಗೌರವ ಧನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಕಳೆದ 12 ದಿನಗಳಿಂದಲೂ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.
ತಿಂಗಳಿಗೆ ಕನಿಷ್ಠ 15,000 ರೂ. ನಿಗದಿತ ಗೌರವಧನ, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು, ನಿವೃತ್ತಿ ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿತ್ತು. ಇದಕ್ಕೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕ ವಲಯದಿಂದ ಬೆಂಬಲ ವ್ಯಕ್ತವಾಗಿತ್ತು. ಚಳಿ, ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಆಶಾ ಕಾರ್ಯಕರ್ತೆಯರು ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕದ 42 ಸಾವಿರ ಕಾರ್ಯಕರ್ತೆಯರಿಗೆ ಅನುಕೂಲ
ಇನ್ನು ಕರ್ನಾಟಕ ಸರ್ಕಾರವು ಈಗ ತೆಗೆದುಕೊಂಡಿರುವ ನಿರ್ಧಾರದಿಂದಾಗಿ ಕರ್ನಾಟಕದ ಅಂದಾಜು 41,000 ದಿಂದ 42,000 ಆಶಾ ಕಾರ್ಯಕರ್ತೆಯರಿಗೆ ಅನುಕೂಲವಾಗಲಿದೆ. ಈ ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಕರ್ನಾಟಕದ ಪ್ರತಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣೆ, ತಾಯಿ ಮತ್ತು ಶಿಶು ಆರೋಗ್ಯ ರಕ್ಷಣೆ, ಮಕ್ಕಳ ಲಸಿಕೆ ಹಾಗೂ ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸುವುದು ಸೇರಿದಂತೆ ಆರೋಗ್ಯ ಇಲಾಖೆಗೆ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕಾರ್ಯಕರ್ತೆಯರಿಗೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ಪಾಲು ಸೇರಿದಂತೆ ಸರಿಸುಮಾರು 7,000 ರೂ. ದಿಂದ 8,000 ರೂ. ವರೆಗೆ ಗೌರವಧನ ಸಿಗುತ್ತಿದ್ದು, ಇನ್ಮುಂದೆ ಇದರೊಂದಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2,000 ರೂ. ಹೆಚ್ಚಳವೂ ಸೇರಲಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ಸಿಗಲಿದೆ.





Click it and Unblock the Notifications
