DV Sadananda Gowda: ಕಮಲ ಬಿಟ್ಟು ಕೈ ಹಿಡಿಯುತ್ತಾರಾ ಸದಾನಂದಗೌಡರು: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಮಾರ್ಚ್ 19: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಅಸಮಾಧಾನಗೊಂಡಿದ್ದು, ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎನ್ನುವ ಚರ್ಚೆ ರಾಜ್ಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ.
ಈ ಕುರಿತು ಉಪಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಒಂದು ಪಕ್ಷದಲ್ಲಿ ಟಿಕೆಟ್ ವಂಚಿತರಾದವರು ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವುದು ರಾಜಕೀಯದಲ್ಲಿ ಸಹಜ. ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಮೂಡಿಗೆರೆಯಲ್ಲಿ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ನಮ್ಮಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಗೆ ಬಿಜೆಪಿಯಲ್ಲಿ ಅವಕಾಶ ಸಿಗದಿದ್ದಾಗ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿಸಿದ್ದೇವೆ. ಯಾವುದೇ ಪಕ್ಷ ಇದಕ್ಕೆ ಹೊರತಾಗಿಲ್ಲ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ತಿಳಿಸಿದರು. ಇನ್ನೂ ಸದಾನಂದ ಗೌಡರ ಸೇರ್ಪಡೆಗೆ ಅವಕಾಶ ಇದೆಯೇ ಎಂಬ ಪ್ರಶ್ನೆಗೆ, ನಮ್ಮ ತಂತ್ರಗಾರಿಕೆಯನ್ನು ನಾವು ಬಿಟ್ಟು ಕೊಡುವುದಿಲ್ಲ ಎಂದು ತಿಳಿಸಿದರು.
ಎರಡು ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ದೇವೇಗೌಡರ ಅಳಿಯ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ.
ಜೆಡಿಎಸ್-ಬಿಜೆಪಿ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಜೆಡಿಎಸ್ ಗೆ ಕೆಲವು ಕ್ಷೇತ್ರಗಳಲ್ಲಿ ಸ್ವಂತ ಶಾಸಕರು, ಸಂಸದರು ಇದ್ದಾರೆ. ಅವರ ಶಕ್ತಿ ಪಕ್ಷಕ್ಕೆ ಬೇಕಾಗಿದೆ. ಆದರೆ ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಬಿಜೆಪಿ ಇದೇ ರೀತಿ ಮಾಡಿಕೊಂಡು ಬಂದಿದೆ. ಇದು ಅವರ ಪಕ್ಷಗಳ ಆಂತರಿಕ ವಿಚಾರ. ಆ ಬಗ್ಗೆ ಅವರೇ ತೀರ್ಮಾನ ಮಾಡಿಕೊಳ್ಳಲಿ. ನನಗೂ ಅದಕ್ಕೂ ಸಂಬಂಧವಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.












Click it and Unblock the Notifications