ಕಮಲ ಬಿಟ್ಟು ಕೈ ಹಿಡಿದ ಬಾಬುರಾವ್ ಚಿಂಚನಸೂರ್: ಖರ್ಗೆ ಅವರೊಂದಿಗೆ ಭಿನ್ನಾಭಿಪ್ರಾಯ ಇದ್ದುದು ನಿಜ ಎಂದ ಚಿಂಚನಸೂರ್
ಮತ್ತೆ ಅಧಿಕಾರಕ್ಕೆ ಬರಲು ಪಣ ತೊಟ್ಟಿದ್ದ ರಾಜ್ಯ ಬಿಜೆಪಿಗೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಗ್ ಶಾಕ್ ನೀಡಿದ್ದಾರೆ.
ಬೆಂಗಳೂರು,ಮಾರ್ಚ್ 22: ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಪಣ ತೊಟ್ಟಿದ್ದ ಬಿಜೆಪಿಗೆ ಚುನಾವಣೆ ಹೊತ್ತಲಿ ಕೋಲಿ ಸಮುದಾಯದ ಪ್ರಬಲ ನಾಯಕ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿ ದೊಡ್ಡ ಶಾಕ್ ನೀಡಿದ್ದರು.
ಯುಗಾದಿ ಹಬ್ಬಂದು (ಮಾರ್ಚ್ 22) ಬಾಬುರಾವ್ ಚಿಂಚನಸೂರ್ ಅವರು ಮೊದಲ ಬಾರಿಗೆ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ,.ಕೆ. ಶಿವಕುಮಾರ್ ಅವರ ಮನೆಯಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರ ನಿವಾಸದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಶಾಲು, ಹೂಗುಚ್ಛ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷಕ್ಕೆ ಬರ ಮಾಡಿಕೊಂಡರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತೊಡೆ ತಟ್ಟೊರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಮುಂದುವರೆದು ನಮ್ಮದು ಮತ್ತು ಖರ್ಗೆ ಅವರದು ತಂದೆ- ಮಗನ ನಡುವಿನ ಜಗಳದಂತೆ ಎಂದು ಚಿಂಚನಸೂರ ತಿಳಿಸಿದ್ದಾರೆ.
ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ.

ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಎಂದು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಈಗಾಗಲೇ ಹಳ್ಳಿಗಳಿಂದ ರಾಜ್ಯ ಮಟ್ಟದವರೆಗೆ ನೂರಾರು ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ಇದ್ದರೂ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗ ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ.
ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಕಲ್ಯಾಣವಾಗಿ, ಅವರ ಜೀವನ ಭದ್ರಾವಾಗಲಿದೆ. ಈ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ನಂಬಿಕೆ ಇಟ್ಟು, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು, ಅವರ ಅನುಯಾಯಿಯಾಗಿ ಪಕ್ಷ ಸೇರುತ್ತಿದ್ದಾರೆ. ಅವರ ರಾಜೀನಾಮೆ ನಿನ್ನೆ ಅಂಗೀಕಾರವಾಗಿದ್ದು, ಇಂದು ಹೊಸ ವರ್ಷದ ಹೊಸ ದಿನ ಆರಂಭವಾಗಲಿ ಎಂದು ಪಕ್ಷಕ್ಕೆ ಸೇರುತ್ತಿದ್ದಾರೆ. ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಬೇಕು ಎಂದು ಭಾವಿಸಿದ್ದೆವು. ಪ್ರಿಯಾಂಕ್ ಖರ್ಗೆ ಅವರು ಊರಿನಲ್ಲಿ ಇಲ್ಲ. ಈ ಸಂದರ್ಭದಲ್ಲಿ ಒಂದು ದಿನವೂ ವ್ಯರ್ಥ ಮಾಡುವುದು ಬೇಡ ಎಂದು ಈ ಶುಭದಿನ ಪಕ್ಷಕ್ಕೆ ಸೇರುತ್ತಿದ್ದಾರೆ. ಪಕ್ಷದ ಎಲ್ಲ ನಾಯಕರ ಜತೆ ಚರ್ಚೆ ಮಾಡಿ ಅವರನ್ನು ಬಹಳ ಸಂತೋಷದಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ' ಎಂದು ತಿಳಿಸಿದರು.
'ನಾಡಿನ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಹೊಸ ವರ್ಷ ಹೊಸ ಆಯಾಮ, ಹೊಸ ಬದಲಾವಣೆ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈಗ ರಾಜ್ಯದಲ್ಲಿ ಬದಲಾವಣೆ ತರಲು ದೇವರು ಒಂದು ಅವಕಾಶ ಕಲ್ಪಿಸಿದ್ದಾನೆ. ನಾವು ರಾಜ್ಯದ ಜನರಿಗೆ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದು ನಾವು ನುಡಿದಂತೆ ನಡೆಯುತ್ತೇವೆ. ನಾವು ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದು, ನಮ್ಮ ನಿರೀಕ್ಷೆಗೂ ಮೀರಿ ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ' ಎಂದು ತಿಳಿಸಿದರು.












Click it and Unblock the Notifications