BREAKING: ಬೆಂಗಳೂರಿಗೆ ಆಗಮಿಸಲಿದ್ದಾರೆ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್!
ಬೆಂಗಳೂರು, ಜು. 10: ಕರ್ನಾಟಕದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಿಂದ ಹೊರಟು ಮಧ್ಯಾಹ್ನ 01.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಟುಂಬ ಸಮೇತರಾಗಿ ಗೆಹ್ಲೋಟ್ ಅವರು ಬಂದಿಳಿಯಲಿದ್ದಾರೆ ಎಂಬ ಅಧಿಕೃತ ಮಾಹಿತಿಯಿದೆ. ಸರ್ಕಾರದ ಪರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಚಿವರೊಬ್ಬರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಿದ್ದಾರೆ. ಗೆಹ್ಲೋಟ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ನಾಳೆ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅತಿ ಕಡಿಮೆ ಸಂಖ್ಯೆಯ ಜನರಿಗೆ ಅವಕಾಶ ಮಾಡಿ ಕೊಡಲಾಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರ ಕುಟುಂಬದ ಐವರು ಸದಸ್ಯರು ಸೇರಿದಂತೆ ಅವರ ಕಡೆಯಿಂದ ಒಟ್ಟು 15 ಜನರು ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿಯಿದೆ. ಜೊತೆಗೆ ರಾಜ್ಯ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಲ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ (ಜು.11) ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

Recommended Video
ರಾಜ್ಯಪಾಲ ವಜುಭಾಯಿ ವಾಲಾ ಅವರು ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಮಾಡಿದ್ದರು. ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದು 2 ವರ್ಷಗಳಾಗಿದ್ದವು.












Click it and Unblock the Notifications