ಹಾಸನಾಂಬ ಜಾತ್ರೆ: ಮಹತ್ವದ ಅಪ್ಡೇಟ್ಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ
ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ ವಿಐಪಿ ಸಂಸ್ಕೃತಿಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ನಮ್ಮ ಸರ್ಕಾರದ ಪ್ರಯತ್ನವನ್ನು ಯಶಸ್ವಿಯಾಗಿಸಲು ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಂದುವರಿದು ನಾನು ಕಳೆದ ವರ್ಷವೂ ಬಂದು ದೇವರ ದರ್ಶನ ಪಡೆದಿದ್ದೆ, ಈ ವರ್ಷವೂ ದರ್ಶನ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ - ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಈ ಬಾರಿ ಅಗತ್ಯಕ್ಕಿಂತ ಹೆಚ್ಚು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು ಎನ್‌ಡಿಆರ್‌ಎಫ್ ನಿಧಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬಾರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ.

ನಮ್ಮದು ಕುವೆಂಪು ಅವರ ಆಶಯದ "ಸರ್ವ ಜನಾಂಗದ ಶಾಂತಿಯ ತೋಟ" ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮಗಳ ಸಾರವೇ ಮನುಷ್ಯ ಪ್ರೀತಿ ಮತ್ತು ಸೌಹಾರ್ದತೆಯ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಂದುವರಿದು ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನನಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ ಇಂತಹ ಬೆದರಿಕೆಗಳಿಗೆ ಯಾರೂ ಹೆದರುವುದಿಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಂದಿರುವ ಬೆದರಿಕೆ ಕರೆಗಳ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ್ ಖರ್ಗೆಯವರಿಗೆ ರಕ್ಷಣೆಯನ್ನು ಕೂಡ ಒದಗಿಸಲಾಗುವುದು ಎಂದಿದ್ದಾರೆ.
ದುಷ್ಟ ಶಕ್ತಿಗಳು ಯಾವಾಗಲೂ ಹೀಗೆ ಬೆದರಿಕೆ ಒಡ್ಡುವ ಕೆಲಸವನ್ನೇ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್ ಅವರು ಹೆದರುವುದಿಲ್ಲ, ನಾನೂ ಹೆದರುವುದಿಲ್ಲ. ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದು ಸವಾಲು ಹಾಕಿದ್ದಾರೆ. ಅವರು ಹೀಗೆ ಹಿಂದೊಮ್ಮೆ ಸವಾಲು ಹಾಕಿದ್ದನ್ನು ನೆನಪು ಮಾಡಿಕೊಂಡರೆ ಉತ್ತಮ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು, ಕೊನೆಗೆ ಸೋತು ಹೋದರು.
ಹಾಸನಾಂಬ ಜಾತ್ರೆಗೆ ಹೆಚ್ಚುವರಿ ಅನುದಾನ ಅಗತ್ಯತೆಯ ಬಗ್ಗೆ ಜಿಲ್ಲಾಡಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಇತರೆ ನೆರವು ನೀಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.












Click it and Unblock the Notifications