Ayanur Manjunath: ಬಿಜೆಪಿ ತೊರೆದ ಆಯನೂರ್ ಮಂಜುನಾಥ್ ಜೆಡಿಎಸ್ ಸೇರ್ಪಡೆ: ಸ್ವಾಗತಿಸಿದ ಹೆಚ್‌ಡಿಕೆ
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷಕ್ಕೆ ಗುಡ್‌ಬೈ ಹೇಳಿದ್ದ ಹಿರಿಯ ನಾಯಕ ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ರಾಜಕೀಯದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿಯಿಂದ ಹೊರಬಂದಿದ್ದಾರೆ. ಇಂದು (ಏಪ್ರಿಲ್ 19) ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಆಯನೂರು ಮಂಜುನಾಥ್ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಮಧ್ಯಾಹ್ನದ ವೇಳೆಗೆ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡುತ್ತೇನೆ ಎಂದಿದ್ದರು.

ಈಗ ತಮ್ಮ ಮುಂದಿನ ನಡೆಯನ್ನು ಅವರು ಬಹಿರಂಗಪಡಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ಆಯನೂರು ಮಂಜುನಾಥ್ ಕೊನೆ ದಿನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬುಧವಾರ ಬೆಳಿಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಸಭಾಪತಿಗಳನ್ನು ಭೇಟಿ ಮಾಡಿ, ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಮಾತ್ರವಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಅವರು, ಜೆಡಿಎಸ್‌ನಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಬಾವುಟ ನೀಡಿ ಸ್ವಾಗತಿಸಿದ ಹೆಚ್‌ಡಿಕೆ
ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಜೆಡಿಎಸ್ ಬಾವುಟ ನೀಡಿ ಆಯನೂರು ಮಂಜುನಾಥ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಜೆಡಿಎಸ್ ಕಚೇರಿಯಲ್ಲೇ ಅವರಿಗೆ 'ಬಿ' ಫಾರಂ ವಿತರಣೆ ಮಾಡಲಾಯಿತು. ಬಿ ಫಾರಂ ಪಡೆದ ಆಯನೂರು ಮಂಜುನಾಥ್ ಹೆಚ್‌ಡಿ ಕುಮಾರಸ್ವಾಮಿಯವರಿಗೆ ಕೈ ಮುಗಿತು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜೆಡಿಎಸ್ ಅಭ್ಯರ್ಥಿ ರಘು ಆಚಾರ್, ಚಿತ್ರದುರ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ
ಗುರುವಾರ ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ಆಯನೂರು ಮಂಜುನಾಥ್‌ಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಸಿದ್ಧರಾಗಿದ್ದ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಕೈಕೊಟ್ಟಿದೆ. ಸದ್ಯ ಬಿಜೆಪಿ ಇಲ್ಲಿನ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ, ಗೊಂದಲಗಳಿಗೆ ಆಸ್ಪದ ನೀಡದಂತೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ.
ಕೆಎಸ್ ಈಶ್ವರಪ್ಪ ಟಿಕೆಟ್ ನಿರಾಕರಿಸಿದ ನಂತರ ಹೊಸ ಅಭ್ಯರ್ಥಿಗೆ ಅವಕಾಶ ಸಿಗಲಿದೆ. ಡಾ. ಧನಂಜಯ್ ಸರ್ಜಿ ಮತ್ತು ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಆದರೆ ಕೊನೆ ಹಂತದಲ್ಲಿ ಬಿಜೆಪಿ ಯಾರಿಗೆ ಶಾಕ್ ಕೊಡುತ್ತೆ, ಯಾರಿಗೆ ಮಣೆ ಹಾಕುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.
ಕಾಂಗ್ರೆಸ್‌ನಿಂದ ಯುವ ಲಿಂಗಾಯತ ಮುಖಂಡ ಯೋಗೇಶ್ ಹೆಚ್.ಸಿ. ಇಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಮೂರನೇ ಲಿಸ್ಟ್‌ನಲ್ಲಿ ಯೋಗೇಶ್ ಹೆಸರನ್ನು ಘೋಷಣೆ ಮಾಡಿತ್ತು. ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿ ಹನ್ನೊಂದು ಜನ ಟಿಕೆಟ್ ಆಕಾಂಕ್ಷಿಗಳಾಗಿದ್ದರೂ, ಯುವ ಮುಖಂಡ, 40 ವರ್ಷದ ಕಾರ್ಪೊರೇಟರ್ ಅನ್ನು ಕಣಕ್ಕಿಳಿಸಿದೆ.












Click it and Unblock the Notifications