ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಸಂಪುಟ ಉಪ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು, ಅಕ್ಟೋಬರ್ 08; ಕರ್ನಾಟಕ ಹೈಕೋರ್ಟ್ ಮುಂದಿನ 6 ತಿಂಗಳಿನಲ್ಲಿ ಎಲ್ಲ ಇಲಾಖೆಗಳ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಖಡಕ್ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಸಂಪುಟ ಉಪ ಸಮಿತಿ ರಚನೆ ಮಾಡಿದೆ.
ರಾಘವೇಂದ್ರ ಆರ್. ಮಣ್ಣೂರ ಸರ್ಕಾರದ ಅಧೀನ ಕಾರ್ಯದರ್ಶಿ (ಸಚಿವ ಸಂಪುಟ) ಈ ಕುರಿತು ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖಾ ಖಾತೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳ ಭರ್ತಿ ಮಾಡುವ ಕುರಿತು ಸಚಿವ ಸಂಪುಟದ ಉಪ ಸಮಿತಿಯನ್ನು ರಚನೆ ಮಾಡುವ ಬಗ್ಗೆ ಎಂಬ ವಿಷಯವನ್ನು ಜ್ಞಾಪನಾ ಪತ್ರ ಒಳಗೊಂಡಿದೆ. 22/9/2023ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯವನ್ನು ಉಲ್ಲೇಖ ಮಾಡಲಾಗಿದೆ.
ಜ್ಞಾಪನಾ ಪತ್ರದ ವಿವರಗಳು; ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪರಾಮರ್ಶಿಸಲು ಈ ಕೆಳಕಂಡ ಸಚಿವರನ್ನು ಒಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಸಂಪುಟ ಉಪ ಸಮಿತಿಯ ಅಧ್ಯಕ್ಷರು. ಗೃಹ ಸಚಿವ ಡಾ. ಜಿ. ಪರಮೇಶ್ವರ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್. ಕೆ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ. ಎಚ್. ಮುನಿಯಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಹಿಂದುಳಿದ ವರ್ಗಗಳ ಖಾತೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಂಪುಟ ಉಪ ಸಮಿತಿ ಸದಸ್ಯರು.
ಕರ್ನಾಟಕ ಹೈಕೋರ್ಟ್‌ಗೆ ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠದ ಮುಂದೆ ಬಂದಿತ್ತು.
ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್ ಲಾಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದು ಸೇರಿ ಎಲ್ಲ ಪ್ರಕ್ರಿಯೆಗಳನ್ನು ಸಮರೋಪಾದಿಯಲ್ಲಿ ನಡೆಸಿ 6 ತಿಂಗಳಲ್ಲಿ ನೇಮಕಾತಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿತ್ತು.
ನ್ಯಾಯಪೀಠ ಅರ್ಜಿ ವಿಚಾರಣೆ ಸಮಯದಲ್ಲಿ ದೀನದಲಿತರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಆ ಸಮುದಾದಯದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯ ಪಟ್ಟಿತ್ತು.
ಬೆಂಗಳೂರಿನ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಈ ಸಂಬಂಧ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಕ್ತ ಮನವಿ ಸಲ್ಲಿಸುವಂತೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿತ್ತು.
ಆದರೆ, ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಅರ್ಜಿದಾರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ 6 ತಿಂಗಳಿನಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು.











Click it and Unblock the Notifications