HD Revanna: ಎಚ್‌ಡಿ ರೇವಣ್ಣಗೆ ಜಾಮೀನು ನೀಡಿದ ಕೋರ್ಟ್
ಬೆಂಗಳೂರು, ಮೇ 20: ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್. ಡಿ. ರೇವಣ್ಣಗೆ ಜಾಮೀನು ಸಿಕ್ಕಿದೆ. ಇದರಿಂದಾಗಿ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಅವರು ಸೋಮವಾರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್. ಡಿ. ರೇವಣ್ಣಗೆ ಜಾಮೀನು ಮಂಜೂರು ಮಾಡಿದ್ದಾರೆ. 5ಲಕ್ಷ ರೂ. ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಜಾಮೀನು ನೀಡಲಾಗಿದೆ.

ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮನೆಗೆಲಸದಾಕೆ ನೀಡಿದ್ದ ದೂರಿನಲ್ಲಿ ಮಾಜಿ ಸಚಿವ ಎಚ್. ಡಿ. ರೇವಣ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಗಳು. ಪ್ರಕರಣದಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.
ಪ್ರಕರಣದ ವಿವರ: ಮೇ 17ರಂದು ಎಚ್. ಡಿ. ರೇವಣ್ಣ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಶರಣಾಗಿದ್ದರು. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆಗ ಕೋರ್ಟ್ 5 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ರೇವಣ್ಣ ಶರಣಾಗಿ ಮಧ್ಯಂತರ ಜಾಮೀನು ಪಡೆದ ಬಳಿಕ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯನ್ನು ಪರಿಸ್ಕರಿಸಿರುವ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ರೇವಣ್ಣ ಜಾಮೀನು ಅರ್ಜಿಗೆ ಎಸ್‌ಪಿಪಿ ಜಯನಾ ಕೊಠಾರಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಎರಡು ಬಾರಿ ನೋಟಿಸ್ ನೀಡಿದರೂ ಸಹ ಆರೋಪಿ ವಿಚಾರಣೆಗೆ ಆಗಮಿಸಿಲ್ಲ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಕೋರ್ಟ್‌ನಲ್ಲಿ ವಾದಿಸಿದ್ದರು.
ಮೈಸೂರು ಜಿಲ್ಲೆಯ ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಬಂಧಿಸಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಚ್. ಡಿ. ರೇವಣ್ಣ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.
ಏಪ್ರಿಲ್ 28ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮನೆಗೆಲಸದಾಕೆ ಮಾಜಿ ಸಚಿವ ಎಚ್. ಡಿ. ರೇವಣ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ದೂರಗಳ ತನಿಖೆಗೆ ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಎಂಬ ಮಾಹಿತಿ ಇದೆ. ಈಗ ಎಚ್. ಡಿ. ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ.
ಎಚ್. ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿರುವುದನ್ನು ಎಸ್‌ಐಟಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಾಗಿದೆ.
ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಹ ಆರೋಪಿ. ಆದರೆ ಅವರು ವಿದೇಶದಲ್ಲಿದ್ದಾರೆ. ರಾಜ್ಯಕ್ಕೆ ಆಗಮಿಸಿದ ಬಳಿಕ ಅವರನ್ನು ಬಂಧಿಸುವ ಕುರಿತು ಎಸ್‌ಐಟಿ ತನಿಖಾಧಿಕಾರಿಗಳು ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.












Click it and Unblock the Notifications