ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಸೂಚನೆ
ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇಂದು
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ಬಾಣಂತಿಯರ ಸಾವಿನ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಈಗಾಗಲೇ ಮೀಟಿಂಗ್ ಮಾಡಿ ಸೂಚನೆ ಕೊಡಲಾಗಿದೆ. ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಇಲ್ಲ' ಎಂದಿದ್ದಾರೆ.

ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಆಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ವಿಧಾನಸೌಧ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 'ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣದ ಬಗ್ಗೆ ಸಭೆ ನಡೆಸಲಾಗಿದ್ದು, ಈಗಾಗಲೇ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ' ಎಂದರು.
ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ- ದಿನೇಶ್ ಗುಂಡೂರಾವ್
ಇನ್ನೂ ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, 'ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣದಲ್ಲಿ ನನ್ನ ತಪ್ಪಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಪರಿಶೀಲನೆ ನಡೆಸಲು ಸೂಚನೆ ನೀಡಿದೆ. ಇಂಥಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ನನ್ನ ಪ್ರತಿಷ್ಟೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಕೂಡ ನಾನು ಸಿದ್ಧ. ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ' ಎಂದು ಹೇಳಿದರು.
ಸರ್ಕಾರದ ನಿರ್ಲಕ್ಷ್ಯವೇ ಕಾರಣ- ಬಿವೈ ವಿಜಯೇಂದ್ರ
ಬಳ್ಳಾರಿ ಬಾಣಂತಿಯರ ಸಾವು ಪ್ರಕರಣದಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, 'ಇದುವರೆಗೆ ಆರೋಗ್ಯ ಸಚಿವರಾಗಲಿ, ವೈದ್ಯಕೀಯ ಶಿಕ್ಷಣ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಯಿಂದ ಔಷಧಗಳನ್ನು ತರಿಸಿಕೊಳ್ಳಲಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಬಾಣಂತಿಯರು ಸಾಯುತ್ತಿರುವಾಗ ಕಾಂಗ್ರೆಸ್‌ನಿಂದ ಸಮಾವೇಶ- ಆರ್ ಅಶೋಕ್
ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ ಇಪ್ಪತ್ತು ಕೋಟಿ ರೂಪಾಯಿ ಖರ್ಚು ಮಾಡಿ ಸಮಾವೇಶ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಕಿಡಿ ಕಾಡಿದ್ದಾರೆ. ಹತ್ತು ತಿಂಗಳಲ್ಲಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2000 ರೂಪಾಯಿ ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಅವರು ಆಗ್ರಹಿಸಿದರು.
ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಮೃತಪಟ್ಟಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಮೃತಪಟ್ಟಿದ್ದಾರೆ. ಕೊರೊನಾ ಸಮಯದಲ್ಲಿ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೆಶ ಮಾಡಿದ್ದಾರೆ ಎಮದು ಆರ್ ಅಶೋಕ್ ವಾಗ್ದಾಳಿ ಮಾಡಿದರು.












Click it and Unblock the Notifications