ಬಳ್ಳಾರಿ ಗಲಭೆಯಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ವಿಜಯೇಂದ್ರ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ನಡುವೆ ನಡೆದ ಗಲಭೆಯಲ್ಲಿ ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ, ಅವರ ಆರೋಗ್ಯ ಕ್ಷೇಮ ವಿಚಾರಿಸಿ ಧೈರ್ಯ ತುಂಬಿದ್ದಾರೆ.
ನಮ್ಮ ಪಕ್ಷದ ಶಾಸಕ ಜನಾರ್ದನ್ ರೆಡ್ಡಿ ಅವರ ಬಳ್ಳಾರಿಯ ಮನೆ ಎದುರು ನಿನ್ನೆ ಉದ್ದೇಶಪೂರ್ವಕವಾಗಿ ನಡೆಸಲಾಗಿರುವ ಕಾಂಗ್ರೆಸ್‌ನ ಪ್ರಾಯೋಜಿತ ಗೂಂಡಾಗಿರಿಯಲ್ಲಿ ಗಾಯಗೊಂಡು, ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿದೆ. ಅವರ ಯೋಗ ಕ್ಷೇಮ ವಿಚಾರಿಸಿ, ಧೈರ್ಯ ತುಂಬಿ ಸಾಂತ್ವನ ಹೇಳಿದ್ದೇನೆ. ನಂತರ ಪಕ್ಷದ ಶಾಸಕ ಜನಾರ್ದನ್ ರೆಡ್ಡಿ ಅವರನ್ನು ಭೇಟಿ ಮಾಡಿ ವಸ್ತುಸ್ಥಿತಿಯ ಮಾಹಿತಿ ಪಡೆದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಗೂಂಡಾ ಗ್ಯಾರಂಟಿ ನಾವು ಒಪ್ಪಲ್ಲ
ಅಧಿಕಾರದ ಅಮಲಿನಲ್ಲಿ ಗೂಂಡಾಗಿರಿ ಮಾಡುತ್ತಿರುವ ಕಾಂಗ್ರೆಸ್‌ಗೆ ಧಿಕ್ಕಾರ. ಕಾಂಗ್ರೆಸ್ ಸರ್ಕಾರದ 'ಗೂಂಡಾ ಗ್ಯಾರಂಟಿ'ಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರುಗಳ ಕ್ರಿಮಿನಲ್ ವರ್ತನೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕು. ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಆಡಳಿತ ಪಕ್ಷದ ಶಾಸಕರ ಗೂಂಡಾವರ್ತನೆ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಳ್ಳಾರಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಗೂಂಡಾಗಿರಿ ನಡೆದಿದೆ. ಮಾಜಿ ಸಚಿವರು, ಹಾಲಿ ಶಾಸಕ ಜನಾರ್ದನ್ ರೆಡ್ಡಿ ಅವರ ನಿವಾಸದ ಮುಂಭಾಗದಲ್ಲಿ ಕಾಂಗ್ರೆಸ್ ಶಾಸಕರ ಆಪ್ತರು ದಾಂಧಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಶಾಸಕರ ಆಪ್ತರು ಖಾಸಗಿ ಗನ್‌ಮ್ಯಾನ್‌ಗಳನ್ನು ಬಳಸಿಕೊಂಡು ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ತೆವಲಿಗೆ ಬಿಜೆಪಿ ನಾಯಕರ, ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಗೂಂಡಾಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೊಂದಿಗೆ ಭೇಟಿಯಾಗಿ ಸಾಂತ್ವನ ಹೇಳಿದ್ದೇವೆ. ಪಕ್ಷದ ಕಾರ್ಯಕರ್ತರು ಧೃತಿಗಿಡಬೇಕಾದ ಅಗತ್ಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ. ಅವರ ನೆರವಿಗೆ ಪಕ್ಷವು ಸದಾ ನಿಲ್ಲಲಿದ್ದು, ಎಂತಹದ್ದೇ ಸಂದರ್ಭ ಬಂದರೂ ಧೈರ್ಯದಿಂದ ಕಾಂಗ್ರೆಸ್‌ನ ಭ್ರಷ್ಟಾಚಾರ ಹಾಗೂ ಆ ಪಕ್ಷದ ಸಾಮಾಜಘಾತುಕ ಶಕ್ತಿಗಳ ವಿರುದ್ಧ ನಿರಂತರ ಹೋರಾಟ ನಡೆಸಬೇಕೆಂದು ಧೈರ್ಯ ತುಂಬಿದ್ದೇವೆ. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತವಾದ ಚಿಕಿತ್ಸೆ ನೀಡಿಲು ವೈದ್ಯರಿಗೆ ಮನವಿ ಮಾಡಿದ್ದು, ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿದ್ದೇವೆ ಎಂದಿದ್ದಾರೆ.
ಎಸ್‌ಪಿ ಸಸ್ಪೆಂಡ್‌ಗೆ ಟೀಕೆ
ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿದೆ. ಆದರೆ ಪವನ್ ಅವರು ನಿನ್ನೆ ಮಧ್ಯಾಹ್ನವಷ್ಟೇ ಬಳ್ಳಾರಿ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದ್ದು, ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೆ ಅವರ ತಲೆದಂಡವಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗುತ್ತಿದ್ದು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ದಾರೆ ಎಂದು ಟೀಕಿಸುತ್ತಿದ್ದಾರೆ.












Click it and Unblock the Notifications