Bangaluru weather: ಬೆಂಗಳೂರಿಗರಿಗೆ ಬೆಳ್ಳಂಬೆಳಗ್ಗೆ ಮಳೆ: ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆರಾಯನ ಅಬ್ಬರ?
ಬೆಂಗಳೂರು, ಅಕ್ಟೋಬರ್ 15: ಬಂಗಾಳದ ಉಪಸಾಗರದ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಬೆಂಗಳೂರು ಜನರಿಗೆ ಬೆಳ್ಳಂಬೆಳಗ್ಗೆ ಮಳೆರಾಯ ಬಿಗ್ ಶಾಕ್ ನೀಡಿದ್ದು, ಮುಂಜಾನೆ ನಾಲ್ಕು ಗಂಟೆಯಿಂದ ಜಿಟಿಜಿಟಿ ಮಳೆ ಶುರುವಾಗಿದ್ದು, ದಿನನಿತ್ಯದ ಚಟುವಟಿಕೆಗಳಿಗೆ ಮಳೆರಾಯ ಕಿರಿಕಿರಿ ಎದುರಾಗಿದೆ. ಬೆಳ್ಳಂಬೆಳಗ್ಗೆಯ ಮಳೆಯಿಂದಾಗಿ ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಲು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಕೆಲಸಕ್ಕೆ ಹೋಗೋರು ಪರದಾಡುವಂತೆ ಆಗಿದೆ. ಇನ್ನೂ ಮಳೆಯಿಂದಾಗಿ ಬೆಳಗ್ಗೆಯೇ ಟ್ರಾಫಿಕ್ ಬಿಸಿ ತಟ್ಟಿದೆ.

ಅಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ವೈಪರಿತ್ಯ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ ಮಳೆಯಿಂದಾಗಿ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಇದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 18 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಸೇರಿದಂತೆ ಬೆಂಗಳೂರು ಮಹಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
ಇಂದಿನಿಂದ ಮೂರಾಲ್ಕು ದಿನಗಳ ಬೆಂಗಳೂರು ಸೇರಿದಂತೆ ರಾಜ್ಯದ ಕಾಲ ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಈಗಾಗಲೇ ಭಾನುವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮೂಲಗಳು ತಿಳಿಸಿವೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.












Click it and Unblock the Notifications