Yatnal: ಉಚ್ಛಾಟನೆ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?
ಬಿಜೆಪಿ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಆರೋಪದ ಮೇರೆಗೆ ರೆಬೆಲ್ ಶಾಸಕರಾಗಿದ್ದ ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ವಿಜಯಪುರ ನಗರ ಶಾಸಕರಾದ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿದ್ದ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಮೂಲಕ ರೆಬೆಲ್‌ಗಳಿಗೆ ಹೈಕಮಾಂಡ್ ಸ್ಪಷ್ಟ ಎಚ್ಚರಿಕೆಯನ್ನೂ ನೀಡಿದೆ. ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಅವರು ಪ್ರತಿಕ್ರಿಯಿಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಉಚ್ಛಾಟನೆ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟರ್) ಪ್ರತಿಕ್ರಿಯಿಸಿರುವ ಯತ್ನಾಳ್, ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ ಎಂದು ಹೈಕಮಾಂಡ್ ವಿರುದ್ಧ ಬೇಸರ ಹೊರಹಾಕಿದ್ದಾರೆ.

ಪಕ್ಷವು ನನಗೆ ಪ್ರತಿಫಲ ನೀಡಿದೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದೂ ಅವರು ಹೇಳಿದ್ದಾರೆ. ಎಲ್ಲ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ದುಷ್ಟ ಜನರಿಗೆ ಸುಭಿಕ್ಷ ಕಾಲ!
ಯತ್ನಾಳ್ ಅವರು ಪುರಂದರ ದಾಸರ ವಚನಗಳ ಮೂಲಕವೂ ಹೈಕಮಾಂಡ್ ಹಾಗೂ ಎದುರು ಬಣದ ನಾಯಕರಿಗೆ ತಿರುಗೇಟು ನೀಡಿದ್ದಾರೆ. ʼಇದನ್ನು ಬರೆಯುವಾಗ ಪುರಂದರ ದಾಸರು ಹೇಳಿದ ಮಾತು ನೆನಪಾಗುತ್ತಿದೆ. ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡಲು ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ, ಸತ್ಯವಂತರಿಗಿದು ಕಾಲವಲ್ಲʼ ಎಂದು ಯತ್ನಾಳ್ ಈ ಸಾಲುಗಳನ್ನು ಉಲ್ಲೇಖಿಸಿ ಆಕ್ರೋಶ ಹೊರಹಾಕಿದ್ದಾರೆ.

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ವಿಜಯೇಂದ್ರ
ಯತ್ನಾಳ್ ಅವರ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಪ್ರತಿಕ್ರಿಯಿಸಿದ್ದಾರೆ. ʼಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ. ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ. ಸಮರ್ಪಣೆ ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು, ಸಹನೆ, ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡೆದಿದ್ದೇನೆʼ ಎಂದಿದ್ದಾರೆ.
ʼಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರ ಜೊತೆಗೂಡಿ ಮುಂದುವರೆಸಿ, ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.












Click it and Unblock the Notifications