ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತ ಬಿಬಿಎಂಪಿ; 59,000 ಫ್ಲೆಕ್ಸ್ ಬ್ಯಾನರ್ ತೆರವು!
ಬೆಂಗಳೂರು, ಆಗಸ್ಟ್ 09 : ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ಬಿಬಿಎಂಪಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 59,000 ಫ್ಲೆಕ್ಸ್ ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವುಗೊಳಸಿದೆ.
ಅಕ್ರಮ ಫ್ಲೆಕ್ಸ್ ಮತ್ತು ಹೋರ್ಡಿಂಗ್‌ಗಳನ್ನು ತೆರವು ಮಾಡುವಂತೆ ಆಗಸ್ಟ್ 2 ರಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶ ನೀಡಿತ್ತು. ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೆ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಅಂತೆಲ್ಲಾ ಹೈಕೋರ್ಟ್ ಮೊನ್ನೇ ಅಷ್ಟೇ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಹೈಕೋರ್ಟ್ ಛೀಮಾರಿ ಹಾಕಿರುವ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ನಗರದ ವಿವಿದೆಡೆ ತಲೆ ಎತ್ತಿದ್ದ 59,000 ಫ್ಲಕ್ಸ್, ಬ್ಯಾನರ್ಗಳನ್ನು ತೆರವು ಮಾಡಿದೆ. ಅಕ್ರಮ ಹೋರ್ಡಿಂಗ್‌ಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ 134 ದೂರುಗಳು ಬಂದಿದ್ದು, 44 ಎಫ್‌ಐಆರ್‌ಗಳು ದಾಖಲಾಗಿವೆ.
ರಾಜ್ಯದ ಉನ್ನತ ನ್ಯಾಯಾಲಯದ ಹಿಂದಿನ ಆದೇಶಗಳು ಮತ್ತು ನಿರ್ದೇಶನಗಳ ಹೊರತಾಗಿಯೂ, ನಾಗರಿಕ ಸಂಸ್ಥೆ ಅದರ ಮೇಲೆ ಕಾರ್ಯನಿರ್ವಹಿಸಲು ವಿಫಲವಾಗಿದೆ. ಫ್ಲೆಕ್ಸ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ಹೆಚ್ಚಾಗಿ ರಾಜಕಾರಣಿಗಳು ಮತ್ತು ಅವರ ಬೆಂಬಲಿಗರು ಬಳಸುತ್ತಾರೆ.
ಇನ್ನೂ ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೆ ತರಲು ಬಿಬಿಎಂಪಿಯು ನಗರದಾದ್ಯಂತ ಫ್ಲೆಕ್ಸ್ ಬ್ಯಾನರ್‌ಗಳಿಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಉಲ್ಲಂಘಿಸುವವರಿಗೆ 50,000 ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮೂರ್ನಾಲ್ಕು ದಿನಗಳಲ್ಲಿ ಅಂದರೆ ಆಗಸ್ಟ್ 15 ರೊಳಗೆ ಇಡೀ ಬೆಂಗಳೂರಿನಲ್ಲಿ ಫ್ಲೆಕ್ಸ್‌ಗಳನ್ನು ನಿಷೇಧಿಸಲಿದ್ದೇವೆ. ಫ್ಲೆಕ್ಸ್‌ಗಳನ್ನು ಹಾಕಲು ಯಾರಿಗೂ ಅವಕಾಶ ನೀಡುವುದಿಲ್ಲ. ಇದು ನನ್ನದು ಅಥವಾ ನನ್ನ ಪಕ್ಷ ಅಥವಾ ರಾಜಕೀಯ ನಾಯಕರು ಅಥವಾ ವಿರೋಧ ಪಕ್ಷಗಳು ಎಂಬುದು ಮುಖ್ಯವಲ್ಲ. ಬೆಂಗಳೂರಿನಲ್ಲಿ ಯಾವುದೇ ಫ್ಲೆಕ್ಸ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ನಿಷೇಧಾಜ್ಞೆ ಜಾರಿಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿರುವುದರಿಂದ ರಾಜಕೀಯ ಪಕ್ಷಗಳು ನಿಯಮಾವಳಿಗೆ ಬದ್ಧವಾಗಿರಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲು ಹಾಗೂ ಅಕ್ರಮ ಹೋರ್ಡಿಂಗ್‌ಗಳನ್ನು ತೆಗೆಯಲು ವಿಫಲವಾಗಿರುವ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಅದನ್ನು ತೆಗೆದುಹಾಕಲು ವಿಫಲವಾದರೆ ನ್ಯಾಯಾಲಯಕ್ಕೆ ದಂಡ ಪಾವತಿಸುವಂತೆ ಬಿಬಿಎಂಪಿಗೆ ಸೂಚಿಸಿತ್ತು.












Click it and Unblock the Notifications