DK Shivakumar: ಡಿನ್ನರ್ ಪಾಲಿಟಿಕ್ಸ್ ಗುದ್ದಾಟದ ನಡುವೆಯೂ ಹೊಸ ಘೋಷಣೆ ಮಾಡಿದ ಡಿಕೆ ಶಿವಕುಮಾರ್
ಬೆಂಗಳೂರು, ಜನವರಿ 09: ರಾಜ್ಯ ರಾಜಕೀಯದಲ್ಲಿ ಸದ್ಯ ಡಿನ್ನರ್ ಪಾಲಿಟಿಕ್ಸ್, ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ. ಈ ಎಲ್ಲಾ ಚರ್ಚೆ ಹಾಗೂ ಬಹಿರಂಗ ಹೇಳಿಕೆಗಳ ನಡುವೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಹೊಸ ಘೋಷಣೆಯನ್ನ ಮಾಡಿದ್ದು, ಮತ್ತೆ ಕಾಂಗ್ರೆಸ್ ಸಜ್ಜಾಗುತ್ತಿದೆ.
ಈ ಕುರಿತು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು ಎಂದು ತಿಳಿಸಿದರು.

ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಇದೇ ತಿಂಗಳು 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ "ಜೈ ಬಾಪು, ಜೈ ಭೀಮ್, ಜೈ ಸಂವಿಧಾನ" ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಬಾಗವಹಿಸುವ ನಾಯಕರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜ.13 ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆಯಲಿದೆ. ಸಂಜೆ 4 ಗಂಟೆಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಲಿದ್ದು, ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಮಧ್ಯೆ ಜನವರಿ 15 ಹಾಗೂ 16ರಂದು ಎಲ್ಲಾ ಶಾಸಕರು, ಪರಾಜಿತ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮ ರದ್ದು ಮಾಡಿ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಪದಾಧಿಕಾರಿಗಳು, ಉಸ್ತುವಾರಿ ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಮಂತ್ರಿಗಳು, ಶಾಸಕರು. ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ತಮ್ಮ ಜವಾಬ್ದಾರಿ ಮುಂದುವರಿಸಬೇಕಿದೆ ಎಂದು ಕರೆ ನೀಡಿದರು.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜ.26ರಂದು ಮಧ್ಯಪ್ರದೇಶದಲ್ಲಿ ಕಾರ್ಯಕ್ರಮ ಮಾಡಲು ಅಂತಿಮಗೊಳಿಸಲಾಗಿದೆ. ಉಳಿದ ದಿನಗಳು ಬೇರೆ ಕಾರ್ಯಕ್ರಮಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ಇನ್ನು 15 ದಿನಗಳ ಕಾಲಾವಕಾಶವಿದ್ದು, ಶಾಸಕರು, ಸಚಿವರು ಸೇರಿ ಸಿದ್ಧತೆ ಮಾಡಲಾಗುವುದು . ಗಾಂಧಿ ಭಾರತ ಕಾರ್ಯಕ್ರಮವನ್ನು ಇಡೀ ವರ್ಷ ಆಚರಣೆ ಮಾಡಲಾಗುವುದು. ಅಮೆರಿಕ ಮಾಜಿ ಅಧ್ಯಕ್ಷ ಒಬಾಮಾ ಅವರನ್ನು ಪಕ್ಷದ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಆಗುವುದಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಅವರ ಜತೆ ಚರ್ಚಿಸಿ ಮುಂದೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.












Click it and Unblock the Notifications