ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಕ್ಲಾಸ್
ಬೆಂಗಳೂರು, ಮೇ 22: ಸಿಟಿ ರೌಂಡ್ಸ್ ವೇಳೆ ಸಿಎಂ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಬನಶಂಕರಿ 2nd stage 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ - 2 tier ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್ ಸರ್ಕಲ್, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್ ಪಾಸ್ ನಿರ್ಮಿಸಲು ಸೂಚಿಸಿದರು.
ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ. ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್
ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ. ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.












Click it and Unblock the Notifications