Bengaluru Rain: ವಾರಾಂತ್ಯದಲ್ಲಿ ಮಳೆ ಆರ್ಭಟದ ಮುನ್ಸೂಚನೆ: ಪ್ರಮಾಣ ವಚನ ಕಾರ್ಯಕ್ರಮಕ್ಕೂ ಅಡ್ಡಿ?
ಅತ್ಯಧಿಕ ಬಿಸಿಲು, ಸೆಖೆಯಿಂದ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೆ ವಾರಾಂತ್ಯದಲ್ಲಿ ಮಳೆ ಸಿಂಚನವಾಗುವ ಮುನ್ಸೂಚನೆ ಇದೆ. ಶನಿವಾರ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರವೇ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು, ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಳೆ ಅಡ್ಡಿ ಆತಂಕ ಎದುರಾಗಿದೆ.
ಶನಿವಾರ ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚಿಮ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮಾತ್ರವಲ್ಲಿ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಶನಿವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ವೇಳೆಗೆ ಮಳೆಯಾಗಬಹುದು ಎಂದು ಹೇಳಲಾಗಿದೆ.

ಶನಿವಾರ ಮಾತ್ರವಲ್ಲದೆ ಭಾನುವಾರ ಕೂಡ ರಾಜಧಾನಿಯಲ್ಲಿ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ತಾಪಮಾನದಲ್ಲಿ ಕೂಡ ಗಣನೀಯ ಇಳಿಕೆಯಾಗಲಿದೆ ಎಂದು ಹೇಳಿದೆ. ಭಾನುವಾರ ಮಧ್ಯಾಹ್ನ ಮತ್ತು ಸಂಜೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಮುನ್ಸೂಚನೆ
ಇನ್ನು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ, ಮೈಸೂರು, ಮಡಿಕೇರಿ, ತುಮಕೂರು ಜಿಲ್ಲೆಗಳ ಹಲವು ಭಾಗಗಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯ ಕುಶಾನಗರದ ಸುಂಠಿಕೊಪ್ಪದಲ್ಲಿ 43 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಬಿಸಿಲಿನ ತೀವ್ರತೆ ಹೆಚ್ಚಾಗಿರಲಿದೆ ಎಂದು ಹೇಳಿದೆ. ತಾಪಮಾನ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸುವಂತೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬಿಸಿಲಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ. ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ವಾತಾವರಣ ಸ್ವಲ್ಪ ತಂಪಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಅಲೆಗಳು 4 ದಿನ ತಡವಾಗಿ ಅಂದರೆ ಜೂನ್ 4 ರಂದು ಕೇರಳಕ್ಕೆ ಅಪ್ಪಳಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications