ಬಿಡದಿ ಟೌನ್‌ಶಿಪ್ ವಿರುದ್ಧ ಮೈತ್ರಿ ನಾಯಕರ ಸಮರ; ಹೆಚ್‌ಡಿಕೆ-ಅಶೋಕ್ ಸಭೆಯಿಂದ ವಿಜಯೇಂದ್ರ ದೂರ
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಜಂಟಿಯಾಗಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆಯಿಂದ ರೈತರು ಹಾಗೂ ಸ್ಥಳೀಯ ಜನರಿಗೆ ತೊಂದರೆಯಾಗಲಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳು ಸರ್ಕಾರದ ವಿರುದ್ಧ ಧ್ವನಿ ಎತ್ತಲು ಮುಂದಾಗಿವೆ. ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಹಾಗೂ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸ್ಥಳೀಯರ ಅಭಿಪ್ರಾಯ ಪಡೆಯಬೇಕು ಎಂದು ಮೈತ್ರಿ ನಾಯಕರು ಒತ್ತಾಯಿಸಿದ್ದಾರೆ.

ಹೆಚ್‌ಡಿಕೆ-ಅಶೋಕ್ ಸಭೆ- ವಿಜಯೇಂದ್ರ ಗೈರು
ಬಿಡದಿ ಟೌನ್‌ಶಿಪ್ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ಅವರ ನಡುವೆ ನಡೆದ ಸಭೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಯೋಜನೆಯ ಸಾಧಕ-ಬಾಧಕಗಳು, ರೈತರ ಸಮಸ್ಯೆಗಳು ಹಾಗೂ ಸರ್ಕಾರದ ವಿರುದ್ಧ ಕೈಗೊಳ್ಳಬೇಕಾದ ಮುಂದಿನ ಹೋರಾಟದ ಕುರಿತು ಚರ್ಚೆ ನಡೆದಿಸಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೆಚ್‌ಡಿಕೆ-ಅಶೋಕ್ ಸಭೆಯಿಂದ ದೂರ ಉಳಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜೆಡಿಎಸ್ ಮತ್ತು ಬಿಜೆಪಿ ಹಿರಿಯ ನಾಯಕರ ಸಭೆಯ ಬಳಿಕ ಮಾಧ್ಯಮಗಳ ಜೊತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಹೇಳಿದರು.
ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ಅವರು ತಿಳಿಸಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಎರಡೂ ಪಕ್ಷಗಳ ನಡುವೆ ಸಮನ್ವಯ ಕೊರತೆ ಆಗಬಾರದು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿ ಪಾದಯಾತ್ರೆ ನಡೆಯುತ್ತಿದೆ. ನಾನೇ ಪಾದಯಾತ್ರೆಗೆ ಚಾಲನೆ ನೀಡುತ್ತೇನೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ ಎಂದು ಟೀಕಿಸಿದರು.
ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಮಾಹಿತಿ ನೀಡಿದರು.
ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಇದಲ್ಲದೆ, ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತುತ್ತವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.


Click it and Unblock the Notifications
