ಪರಿಷತ್ ಉಪ ಚುನಾವಣೆ: ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಬಿಜೆಪಿ
ಬೆಂಗಳೂರು, ಅಕ್ಟೋಬರ್ 03: ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಪುತ್ತೂರು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಸೋಮವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ವಿಧಾನ ಪರಿಷತ್ ಉಪ ಚುನಾವಣೆಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿ ಆದೇಶವನ್ನು ಹೊರಡಿಸಿದ್ದಾರೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ರಾಜೂ ಪೂಜಾರಿ ಅಭ್ಯರ್ಥಿಯಾಗಿದ್ದಾರೆ.

ಉಸ್ತುವಾರಿಗಳ ನೇಮಕ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಉಪ ಚುನಾವಣೆಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿಯಾಗಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದಲೇ ಉಪ ಚುನಾವಣೆ ಎದುರಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ ಬಳಿಕ ಅವರು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಉಪ ಚುನಾವಣೆಗೆ ರಾಜೇಶ್ ನಾಯ್ಕ್, ಶಾಸಕರು ಸಹ-ಉಸ್ತುವಾರಿಯಾಗಿದ್ದಾರೆ. ಅಲ್ಲದೇ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಸಹ-ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಉಪ ಚುನಾವಣೆಗೆ ಕರ್ನಾಟಕ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿತ್ತು. ಆದರೆ ಪಕ್ಷ ಅಚ್ಚರಿ ಎಂಬಂತೆ ಕಿಶೋರ್ ಕುಮಾರ್ ಪುತ್ತೂರು ಕಣಕ್ಕಿಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣೆಯಲ್ಲಿ ನೇರ ಪೈಪೋಟಿ ನಡೆಯಲಿದೆ.
ಅಭ್ಯರ್ಥಿ ಘೋಷಣೆ ಬಳಿಕ ಕಿಶೋರ್ ಕುಮಾರ್ ಪುತ್ತೂರು ಭೇಟಿಯಾಗಿ ಕಟೀಲ್ ಅಭಿನಂದನೆ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, 'ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿರುವ ಆತ್ಮೀಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗೆ ಪೂರ್ಣ ರೀತಿಯಲ್ಲಿ ನಾವೆಲ್ಲರೂ ಕಂಕಣಬದ್ಧರಾಗಿದ್ದೇವೆ. ಅತೀ ಹೆಚ್ಚಿನ ಮತಗಳಿಂದ ಗೆದ್ದು , ವಿಧಾನಪರಿಷತ್ ನಲ್ಲಿ ಪಕ್ಷದ, ಕ್ಷೇತ್ರದ ಧ್ವನಿಯಾಗಲು ಶುಭ ಹಾರೈಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು' ಎಂದು ಹೇಳಿದ್ದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿ 5/1/2028ರ ತನಕ ಇತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಅವರು ಜೂನ್ 24ರಂದು ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಉಪ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು 3 ಅಕ್ಟೋಬರ್ ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.












Click it and Unblock the Notifications