ಭಾರಿ ಪೈಪೋಟಿ ಮಧ್ಯೆ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ!
ಬೆಂಗಳೂರು, ಅ. 04: ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಸಚಿವ ದಿ. ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಲ್ಲಿ ಪೈಪೋಟಿ ಹೆಚ್ಚಾಗಿತ್ತು. ಹೀಗಾಗಿ ಆ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಡುವುದು ಎಂಬುದು ರಾಜ್ಯ ಬಿಜೆಪಿ ನಾಯಕರಿಗೆ ಸವಾಲಿನ ವಿಷಯವಾಗಿತ್ತು. ಆದರೆ ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಹಾನಗಲ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ!
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ತೀವ್ರ ಪೈಪೋಟಿಯಿತ್ತು. ಹೀಗಾಗಿ ಅಳೆದು ತೂಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಮೂವರು ಅಭ್ಯರ್ಥಿಗಳ ಹೆಸರುಗಳನ್ನು ಕಳುಹಿಸಿ ಕೊಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ.
ಸಂಸದ ಶಿವಕುಮಾರ್ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಸ್ಥಳೀಯ ಬಿಜೆಪಿ ನಾಯಕ ಕಲ್ಯಾಣ್ ಕುಮಾರ್ ಶೆಟ್ಟರ್ ಹಾಗೂ ಹಾವೇರಿ ಕ್ಷೇತ್ರದ ಮಾಜಿ ಶಾಸಕ ಶಿವರಾಜ ಸಜ್ಜನರ್ ಅವರಲ್ಲಿ ಒಬ್ಬರಿಗೆ ಟಿಕೆಟ್ ಕೊಡುವಂತೆ ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದೆ ಎಂಬ ಮಾಹಿತಿ ಬಂದಿದೆ. ಆದರೆ ರೇವತಿ ಉದಾಸಿ ಅವರಿಗೆ ಟಿಕೆಟ್ ಬಹುತೇಕ ಖಚಿತ ಎಂಬ ಮಾಹಿತಿ ಬಿಜೆಪಿ ವಲಯದಿಂದ ಬಂದಿದೆ.

ಅಭ್ಯರ್ಥಿಗಳು ಅಂತಿಮ; ಅಧಿಕೃತ ಘೊಷಣೆ ಬಾಕಿ!
ಇನ್ನು ವಿಜಯಪುರ ಜಿಲ್ಲೆ ಸಿಂದಗಿ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗೆ ಪೈಪೋಟಿ ಇತ್ತು. ಆದರೆ ಮಾಜಿ ಶಾಸಕ ರಮೇಶ್ ಭೂಸನೂರ ಅವರಿಗೆ ಬಿಜೆಪಿ ಟಿಕೆಟ್ ಕೊಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ. ರಮೇಶ್ ಭೂಸನೂರು ಜೊತೆಗೆ ಸಿದ್ದು ಬಿರಾದಾರ್ ಹಾಗೂ ಸಂಗನಗೌಡ ಪಾಟೀಲ್ ಅವರ ಹೆಸರುಗಳನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ.
ಹಾನಗಲ್ ಕ್ಷೇತ್ರಕ್ಕೆ ರೇವತಿ ಉದಾಸಿ, ಸಿಂದಗಿಗೆ ರಮೇಶ್ ಭೂಸನೂರ ಅವರ ಹೆಸರುಗಳು ಬಹುತೇಕ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿಯೂ ಬಿಜೆಪಿ ವಲಯದಿಂದ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇವರ ಹೆಸರುಗಳನ್ನೇ ಘೊಷಣೆ ಮಾಡಲಿದೆ ಎನ್ನಲಾಗಿದೆ. ಇದೇ ವಿಚಾರದ ಬಗ್ಗೆ ಸಿಟಿ ರವಿ ಅವರು ಸಭೆ ಬಳಿಕ ಮಾತನಾಡಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲು ಮೊದಲ ಆದ್ಯತೆ!
ಸಭೆ ಬಳಿಕ ಮಾತನಾಡಿರುವ ಕೋಟ್ ಕಮಿಟಿ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, "ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಆಂತರಿಕ ಹಾಗೂ ಗ್ರೌಂಡ್ ರಿಪೋರ್ಟ್ ಬಿಜೆಪಿ ಪರ ಇದೆ. ಆ ಬಗ್ಗೆ ಚರ್ಚೆ ಮಾಡಿದ್ದೇವೆ. ಜೊತೆಗೆ ಎರಡೂ ಕ್ಷೇತ್ರಗಳಿಗೂ ಹಲವು ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಅವರಲ್ಲಿ ಪ್ರತಿ ಕ್ಷೇತ್ರಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ಅಧಿಕಾರವನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊಟ್ಟಿದ್ದೇವೆ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬುದು ನಮ್ಮ ಮೊದಲ ಆದ್ಯತೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ" ಎಂದಿದ್ದಾರೆ. ಜೊತೆಗೆ ಎರಡೂ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಗಳನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.
Recommended Video

ಹಾನಗಲ್, ಸಿಂದಗಿ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳು!
ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಸಚಿವರಾದ ಮುರುಗೇಶ ನಿರಾಣಿ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ್, ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಮಹೇಶ್ ಟೆಂಗಿಕನಾಯಿ, ರಾಜೂಗೌಡ, ನೆಹರು ಓಲೇಕಾರ್, ಎಂ ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣ್ ಕುಮಾರ್ ಗುತ್ತೂರು ಅವರಿಗೆ ಚುನಾವಣಾ ಉಸ್ತುವಾರಿ ಕೊಡಲಾಗಿದೆ.
ಸಿಂದಗಿ ಉಪ ಚುನಾವಣೆಗೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಸಿಸಿ ಪಾಟೀಲ್, ವಿ. ಸೋಮಣ್ಣ, ಸಂಸದ ರಮೇಶ್ ಜಿಗಜಿಣಗಿ, ಬಸವನಗೌಡ ಪಾಟೀಲ್ ಯತ್ನಾಳ್, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ, ಪಿ. ರಾಜೀವ್, ಶ್ರೀಕಾಂತ ಕುಲಕರ್ಣಿ, ಬಾಬುರಾವ್ ಚಿಂಚನಸೂರ ಅವರನ್ನು ನೇಮಕ ಮಾಡಲಾಗಿದೆ.











Click it and Unblock the Notifications