CM ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಿಯೋಗ! ಸರ್ಕಾರದ ಮುಂದಿಟ್ಟ ಬೇಡಿಕೆಗಳೇನು? ಮಹತ್ವದ ಮಾಹಿತಿ
ಬೆಂಗಳೂರು, ಫೆಬ್ರವರಿ 28: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ರಾಜ್ಯ ಬಿಜೆಪಿ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿಗೆ ಅನುದಾನವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿತು. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು .
ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಜೊತೆ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಬೆಂಗಳೂರು ದಕ್ಷಿಣ ಸಂಸದ ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ , ಬೆಂಗಳೂರಿನ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ರಾಜ್ಯಸಭಾ ಸದಸ್ಯರು, 3 ಜಿಲ್ಲೆಗಳ ಅಧ್ಯಕ್ಷರು, ಮತ್ತು ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಈ ನಿಯೋಗದಲ್ಲಿ ಇದ್ದರು.ಕುಮಾರಕೃಪಾ ಅತಿಥಿಗೃಹದಲ್ಲಿ ಸಭೆ ಸೇರಿ, ನಂತರ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಭೇಟಿ ಕೊಡಲಾಯಿತು.

ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ 100ಕೋಟಿ ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು.
ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೋರಿದರು. ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು .
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಹಾಗೂ ಬಜೆಟ್‍ನಲ್ಲಿ 6ರಿಂದ 8 ಸಾವಿರ ಕೋಟಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ವಿವರಿಸಿದರು.
ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಅವರು, ಮೆಟ್ರೋ ಪ್ರಯಾಣ ದರ ಜಾಸ್ತಿ ಆಗಿದ್ದು ಅದನ್ನು ಕಡಿಮೆ ಮಾಡುವ ಕುರಿತಂತೆ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ಅಭಿವೃದ್ಧಿಗೆ ಅನುದಾನ ಮಾತ್ರವಲ್ಲದೆ, ಮೊದಲ ಬಾರಿ ಗೆದ್ದ ಶಾಸಕರಿಗೆ ಅನುದಾನ ಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದರು. ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿಸಾರಿಯೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಸಂಬಂಧಿಸಿ ಬಿಬಿಎಂಪಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಆಕ್ಷೇಪಿಸಿದರು.
ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲು ಒತ್ತಾಯಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಇತಿಮಿತಿಯೊಳಗೆ ಎಷ್ಟು ಅನುದಾನ ಕೊಡಲು ಸಾಧ್ಯವೋ ಆ ಕಡೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಹಿಂದೆ ಯಾವತ್ತೂ ಬೆಂಗಳೂರು ನಗರಕ್ಕೆ ಇಂಥ ದುಸ್ಥಿತಿ ಬಂದಿರಲಿಲ್ಲ. ಪ್ರತಿ ಬಜೆಟ್‍ನಲ್ಲೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು.
ಯಡಿಯೂರಪ್ಪನವರು ಹಿಂದೆ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಶಾಸಕರಿಗೂ ಹೆಚ್ಚಿನ ಅನುದಾನ ನೀಡಿದ್ದರು. ಕರ್ನಾಟಕವನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಕ ನೋಡುತ್ತಾರೆ ಎಂದು ತಿಳಿಸಿದರು. ಗ್ರೇಟರ್ ಬೆಂಗಳೂರಿನ ಹೆಸರಿನಲ್ಲಿ ಬಿಬಿಎಂಪಿ ಚುನಾವಣೆ ಮುಂದೂಡಬಾರದು ಎಂಬ ಕುರಿತು ನಾವು ಸದನದಲ್ಲೂ ಚರ್ಚೆ ಮಾಡುತ್ತೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವೈಜ್ಞಾನಿಕ ಟನೆಲ್ ರಸ್ತೆ ಕುರಿತು ಕೂಡ ಸದನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ, ಕಾಮಗಾರಿಗಳು ಆರಂಭವಾಗದೆ ಇರುವುದು, ಪಾರ್ಕಿನ ವಾಚ್‍ಮೆನ್‍ಗೆ ಹಣ ಕೊಡಲೂ ಸಾಧ್ಯ ಆಗದೆ ಇರುವುದನ್ನು ನೋಡಿ, ಎರಡು ವರ್ಷ ಕಾದು ವಿಧಿಯಿಲ್ಲದೆ ಸಿಎಂ ಭೇಟಿ ಮಾಡಿದ್ದೇವೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾದ ಕುರಿತು ಗಮನ ಸೆಳೆದಿದ್ದೇವೆ ಎಂದರು. ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಅಭಿವೃದ್ಧಿಯೂ ಕುಂಠಿತವಾಗಿದೆ ಎಂದ ಅವರು, ಬೆಂಗಳೂರಿಗೆ ಅನುದಾನ ಕೊಡಿ; ರಾಜ್ಯದ ಎಲ್ಲ ಬಿಜೆಪಿ ಶಾಸಕರಿಗೆ ಅನುದಾನ ಕೊಡಿ ಎಂದು ಕೇಳಿದ್ದೇವೆ. ವಿಪಕ್ಷಗಳಿಗೆ ಅನ್ಯಾಯ ಮಾಡದಿರಿ, ರಾಜ್ಯದ ಸಮಗ್ರ ಬೆಳವಣಿಗೆಗೆ ಅನುದಾನ ನೀಡಿ ಎಂದು ಕೇಳಿದ್ದಾಗಿ ವಿವರಿಸಿದರು. ಹಿಂದೆ ನಮ್ಮ ಸರಕಾರ ಸಿದ್ದರಾಮಯ್ಯನವರಿಗೆ ವರ್ಷಕ್ಕೆ 100 ಕೋಟಿ ಅನುದಾನವನ್ನು ಕೊಟ್ಟಿತ್ತು ಎಂದು ಗಮನ ಸೆಳೆದರು. ಈಗ ಪ್ರತಿ ಕ್ಷೇತ್ರಕ್ಕೆ 120ರಿಂದ 150 ಕೋಟಿ ಕೊಡಲು ಕೇಳಿದ್ದಾಗಿ ತಿಳಿಸಿದರು.












Click it and Unblock the Notifications