B.Y.Vijayendra: ಗುತ್ತಿಗೆದಾರನ ಡೆತ್‌ನೋಟ್ ಕೇಸ್ ಸಿಬಿಐಗೆ ವಹಿಸಲು ವಿಜಯೇಂದ್ರ ಆಗ್ರಹ, ಸಚಿವ ಪ್ರಿಯಾಂಕ್‌ಗೆ ಢವಢವ
ಬಿಜೆಪಿ ಶಾಸಕರ ಕೊಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿದೆ. ಸದ್ಯ ಇದು ಪ್ರಿಯಾಂಕ್ ಖರ್ಗೆ ಅವರಿಗೂ ಸುರುಳಿಯಂತೆ ಸಿಲುಕಿಕೊಂಡಿದೆ. ಸರ್ಕಾರವು ಈ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಚಿವ ಪ್ರಿಯಾಂಕ್ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್‌ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್‌ನೋಟ್‌ನಲ್ಲಿ ನಮ್ಮ ಪಕ್ಷದ ಶಾಸಕರಾದ ಬಸವರಾಜ್ ಮತ್ತಿಮಡು, ಬಿಜೆಪಿ ನಾಯಕರಾದ ಚಂದು ಪಾಟೀಲ್, ಮಣಿಕಂಠ ರಾಥೋಡ್ ಹಾಗೂ ಆಂದೋಲ ಸ್ವಾಮೀಜಿಯವರ ಹತ್ಯೆಗೆ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್‌ಗೆ ಸುಪಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ ನೀಡಿದಂತಿದೆ. ಇತ್ತೀಚೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳಕ್ಕೆ ತಹಶೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ವಿಧಾನ ಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ, ಸಿ.ಟಿ.ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದರು. ಈಗ ಸಚಿವ ಪ್ರಿಯಾಂಕ್ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ, ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ. ಪ್ರತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ್ಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ. ಇದು ಆತ್ಮಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ವಿಪರೀತ ಆರ್ಥಿಕ ಒತ್ತಡ ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸುತ್ತಿದೆ. ಸಚಿವರ ಕೈ ಕೆಳಗಿನ ಅಧಿಕಾರಿಗಳು ಹಾಗೂ ಆಪ್ತರ ಒತ್ತಡಗಳು ಗುತ್ತಿಗೆದಾರರನ್ನು ಉಸಿರುಗಟ್ಟಿಸುತ್ತಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಬಲಗೈ ಬಂಟ ಹಾಗೂ ಕಾಂಗ್ರೆಸ್ ಮುಖಂಡ ರಾಜುವಿನ ದೌರ್ಜನ್ಯಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರೋ ಸಚಿನ್ ಬರೆದಿಟ್ಟಿರುವ ಪತ್ರ ಇದಕ್ಕೆ ಸಾಕ್ಷಿ ಒದಗಿಸಿದೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳು ಪಕ್ಷಪಾತಿಗಳಂತೆ ವರ್ತಿಸುವುದನ್ನು ಬಿಟ್ಟು ಪಾರದರ್ಶಕ ತನಿಖೆ ನಡೆಸದಿದ್ದರೆ, ಈ ವಿಷಯವನ್ನು ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯೂ ನೀಡಿದ್ದಾರೆ.












Click it and Unblock the Notifications