ಶಿವಮೊಗ್ಗ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳು ಅಂತಿಮ, ಯಾರಿಗೆ ಎಲ್ಲಿ ಟಿಕೆಟ್?
ಶಿವಮೊಗ್ಗ, ಮಾರ್ಚ್ 02 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಸಿಕ್ಕಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಸಾಗರ, ಶಿಕಾರಿಪುರ, ಸೊರಬ, ತೀರ್ಥಹಳ್ಳಿ ಮತ್ತು ಭದ್ರಾವತಿ ಸೇರಿ 7 ವಿಧಾನಸಭಾ ಕ್ಷೇತ್ರಗಳಿವೆ. ಇವುಗಳ ಪೈಕಿ ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಅವರು ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ.ವೈ.ರಾಘವೇಂದ್ರ. ಆದರೆ, 2018ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇನ್ನು ಶಿವಮೊಗ್ಗ ನಗರದ ಕ್ಷೇತ್ರದ ಟಿಕೆಟ್‌ಗೆ ಯಾರಿಗೆ? ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿತ್ತು. ಅಂತಿಮವಾಗಿ ಈಶ್ವರಪ್ಪ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹರತಾಳು ಹಾಲಪ್ಪ
ಸಾಗರ ಕ್ಷೇತ್ರದಿಂದ ಮಾಜಿ ಸಚಿವ ಹರತಾಳು ಹಾಲಪ್ಪ ಸ್ಪರ್ಧಿಸಲಿದ್ದಾರೆ. ಸೊರಬ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಅವರು ಈ ಬಾರಿ ಕ್ಷೇತ್ರ ಬದಲಾವಣೆ ಮಾಡಿದ್ದಾರೆ. ಬೇಳೂರು ಗೋಪಾಲಕೃಷ್ಣ ಅವರು ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕುಮಾರ್ ಬಂಗಾರಪ್ಪ
ಸೊರಬ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಅಭ್ಯರ್ಥಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಕುಮಾರ್ ಬಂಗಾರಪ್ಪ ಅವರು ಸೊರಬದಿಂದ ಸ್ಪರ್ಧಿಸುವ ಕಾರಣ ಹಾಲಪ್ಪ ಅವರು ಸಾಗರಕ್ಕೆ ಹೋಗಿದ್ದಾರೆ. ಸೊರಬ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಸಹೋದರ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ವಿರುದ್ಧ ಸ್ಪರ್ಧಿಸಲಿದ್ದಾರೆ.

ಆರಗ ಜ್ಞಾನೇಂದ್ರ
ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರಿಗೆ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಈಗಾಗಲೇ ಅವರು ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ
ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಮತ್ತು ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ತಂದೆಗಾಗಿ ಕ್ಷೇತ್ರ ಬಿಟ್ಟುಕೊಡಲಿದ್ದಾರೆ.

ಕೆ.ಎಸ್.ಈಶ್ವರಪ್ಪ
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು. 2013ರ ಚುನಾವಣೆಯಲ್ಲಿಯೂ ಈಶ್ವರಪ್ಪ ಅವರು ಕ್ಷೇತ್ರದಿಂದ ಸ್ಪರ್ಧಿಸಿ 33,462 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.












Click it and Unblock the Notifications