ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದೆ: ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 30: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಆಡಳಿತಾರೂಢ ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದೆ. ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿ ಆಪರೇಷನ್ ಕಮಲ ಆರಂಭಿಸಿದ್ದಾರೆ. ಅವರು ಸಾಕಷ್ಟು ಹಣವನ್ನು ಖರ್ಚು ಮಾಡುತ್ತಾರೆ. ಚುನಾವಣಾ ಆಯೋಗ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಬೇಕು. ಅವರು ಅದನ್ನು ಮಾಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಆದಾಗ್ಯೂ, ಮೇ 10ರಂದು ಕರ್ನಾಟಕದಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ತಮ್ಮ ಪಕ್ಷವು ಚುನಾವಣೆಗೆ ಸಿದ್ಧವಾಗಿದೆ. ನಿನ್ನೆ ಅಥವಾ ಇಂದು ಚುನಾವಣೆ ಘೋಷಣೆಯಾಗಲಿದೆ ಎಂದು ನಾವು ನಿರೀಕ್ಷಿಸಿದ್ದೆವು. ಈ ಚುನಾವಣೆ ಒಂದೇ ಹಂತದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ಎಂದರು.
ಇದಕ್ಕೂ ಮುನ್ನ ಭಾರತೀಯ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಮೇ 10ರಂದು ಚುನವಾಣೆ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 ಆಗಿರುತ್ತದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನಾಂಕವಾಗಿರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಹೇಳಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಪಕ್ಷವು ವರುಣಾದಿಂದ ಸ್ಪರ್ಧಿಸುವಂತೆ ಹೇಳಿದೆ. ಕೋಲಾರದಿಂದಲೂ ಸ್ಪರ್ಧಿಸುವಂತೆ ಜನರು ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವರುಣಾ ಜೊತೆಗೆ ಕೋಲಾರದಿಂದಲೂ ಕಣಕ್ಕಿಳಿಯುತ್ತೇನೆ ಎಂದು ಅವರು ಖಚಿತ ಪಡಿಸಿದ್ದಾರೆ.

ವರುಣಾ ವಿಧಾನಸಭೆ ಕ್ಷೇತ್ರದಿಂದ ಜಯಗಳಿಸಿದೆ. ಅದು ಸಿದ್ದರಾಮಯ್ಯವರಿಗೆ ಅದೃಷ್ಟದ ಕ್ಷೇತ್ರವೆಂದು ಜನರು ಹೇಳುತ್ತಾರೆ. ಅಲ್ಲಿಂದ ಗೆದ್ದ ಮೇಲೆಯೇ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದೆ. ನನ್ನ ಬದುಕಿನ ಕೊನೆಯ ಚುನಾವಣೆ ನನ್ನ ಹುಟ್ಟೂರಿನಲ್ಲೇ ಆಗಬೇಕಿದೆ. ಈ ಆಸೆ ನನಗೂ ಇದೆ. ಈ ಹಿನ್ನೆಲೆಯಲ್ಲಿ ನಾನು ವರುಣಾದೊಂದಿಗೆ ಕೋಲಾರದಿಂದಲೂ ಕಣಕ್ಕಿಳಿಯುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಜೆಡಿಎಸ್ - ಬಿಜೆಪಿ ಮೈತ್ರಿ ಕುರಿತಂತೆ ಮಾತನಾಡಿದ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿಯೂ ಈ ಎರಡೂ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದವು. ಈ ಬಾರಿಯೂ ಮೈತ್ರಿ ಮಾಡಿಕೊಂಡರೂ ಅಚ್ಚರಿ ಪಡಬೇಕಿಲ್ಲ. ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯವರು ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿ ಕೈವಾಡ ಇರಬಹುದು ಎಂದು ಹೇಳಿದ್ದಾರೆ.
ಚಾಮರಾಜಪೇಟೆ, ಕೋಲಾರ, ಬಾದಾಮಿ, ಕೊಪ್ಪಳ, ವರುಣಾ, ಚಾಮರಾಜನಗರ ಸೇರಿದಂತೆ ಕಳೆದ ಕೆಲವು ತಿಂಗಳುಗಳಿಂದ ಸಿದ್ದರಾಮಯ್ಯನವರ ಸಂಭಾವ್ಯ ಕ್ಷೇತ್ರಗಳ ಹೆಸರುಗಳು ಕೇಳಿಬರುತ್ತಲೇ ಇವೆ. 2018ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ಕಂಗೆಟ್ಟಿದ್ದ ಅವರ ಹಿಂಬಾಲಕರು ವರುಣಾ ಕ್ಷೇತ್ರವನ್ನು ಆಯ್ಕೆ ಮಾಡಬೇಕೊಳ್ಳುವಂತೆ ಒತ್ತಾಯಿಸಿದ್ದರು.












Click it and Unblock the Notifications