ರಾಜ್ಯಸಭೆಗೆ ಬಿಜೆಪಿಯಿಂದ ಇಬ್ಬರ ಹೆಸರು ಶಿಫಾರಸು: ಯಾರಿಗೆ ಸಿಗಲಿದೆ ಚಾನ್ಸ್?
ಬೆಂಗಳೂರು, ಫೆಬ್ರವರಿ 10: ಲೋಕಸಭಾ ಚುನಾವಣೆ ಹಿನ್ನಲೆ ಕಮಲ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಲೋಕಸಮರದ ಜೊತೆ ಜೊತೆಗೆ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ವಿಚಾರವಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಶುಕ್ರವಾರ ಭೇಟಿ ಮಾತುಕತೆ ನಡೆಸಿದ್ದಾರೆ.
ಹೌದು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುವ ಸಂಬಂಧ ಬಿಜೆಪಿಯ ರಾಜ್ಯ ಘಟಕದ ಪ್ರಮುಖರ ಸಭೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಅಲ್ಲದೇ ಬಿಜೆಪಿ ಹೈಕಮಾಂಡ್ ರಾಜ್ಯ ಸಭೆಗೆ ನಾಲ್ಕು ಹೆಸರುಗಳನ್ನ ಶಿಫಾರಸ್ಸು ಮಾಡಲು ಸೂಚನೆ ನೀಡಿತ್ತು. ಅದರಂತೆ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ನಾಲ್ವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.

ಇನ್ನೂ ಈ ವಿಚಾರವಾಗಿಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೊತೆಗೆ ವಿಜಯೇಂದ್ರ ಅವರು ಮಾತನಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಅಭ್ಯರ್ಥಿಯಗಳನ್ನ ಈ ವಾರ ಪ್ರಕಟಿಸಲಿದ್ದು, ವಿಧಾನ ಪರಿಷತ್ ನ ನಾಲ್ಕು ಅಭ್ಯರ್ಥಿಗಳನ್ನು ಒಂದು ವಾರದಲ್ಲಿ ವರಿಷ್ಠರು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2006ರಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ರಾಜೀವ್ ಚಂದ್ರಶೇಖರ್ ಅವರ ಅವಧಿ ಏಪ್ರಿಲ್ 2ಕ್ಕೆ ಮುಗಿಯಲಿದೆ. ಲೋಕಸಭಾ ಚುನಾವಣೆಗೆ ರಾಜೀವ್ ಅವರನ್ನು ಕಣಕ್ಕೆ ಇಳಿಸಲು ಪಕ್ಷದ ವರಿಷ್ಠರು ತೀರ್ಮಾನಿಸಿದರೆ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ಸಿಗಲಿದೆ.ರಾಜ್ಯಸಭಾ ಚುನಾವಣೆ ಇದೇ 27ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇದೇ 15ರಂದು ಕೊನೆಯ ದಿನವಾಗಿದೆ. ಇತ್ತ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿ ಸೋಮಣ್ಣ ಅವರ ಹೆಸರು ಚರ್ಚೆ ಬಂದಿದೆ. ಆದರೆ, ವಿಧಾನಸಭಾ ಚುಣಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಇತ್ತ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಕೇಳಿ ಬಂದಿದೆ.

ಇನ್ನೂ ನಡ್ಡಾ ಭೇಟಿಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ವಿಜಯೇಂದ್ರ ಅವರು, ಪಕ್ಷದ ಹಿರಿಯ ಮುಖಂಡ ವಿ.ಸೋಮಣ್ಣ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಚಾರಗಳು ಚರ್ಚೆ ಆಗಿವೆ. ಅಭ್ಯರ್ಥಿಗಳ ಆಯ್ಕೆ ಕುರಿತು ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು. ಅಲ್ಲದೇ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನ ಗೆಲ್ಲಲಿದ್ದೇವೆ ಎಂದು ರಾಷ್ಟ್ರಧ್ಯಕ್ಷರಿಗೆ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು.












Click it and Unblock the Notifications