ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಹೈಕಮಾಂಡ್
ಬೆಂಗಳೂರು, ಜೂನ್ 02: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಮೂರು ಸ್ಥಾನಗಳಿಗೆ 40 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಒಕ್ಕಲಿಗ ಸಮುದಾಯದ ಮಾಜಿ ಸಚಿವ ಸಿ.ಟಿ ರವಿ, ಗಂಗಾಮತಸ್ಥ ಎನ್. ರವಿಕುಮಾರ್ ಹಾಗೂ ಮರಾಠಾ ಸಮುದಾಯದ ಎಂ.ಜಿ ಮೂಳೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ವಿಧಾನ ಪರಿಷತ್ ಹಾಲಿ ಸದಸ್ಯರಾದ ಎನ್ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಸಿಟಿ ರವಿ ಅವರಿಗೆ ಹೈಕಮಾಂಡ್ ಬಂಪರ್ ಗಿಫ್ಟ್ ಕೊಟ್ಟಿದೆ. ಇತ್ತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್ಗೆ ಅವರಿಗೆ ಪರಿಷತ್ ನಲ್ಲಿ ಸ್ಥಾನ ಸಿಗುತ್ತದೆ ಎಂಬ ಚರ್ಚೆ ನಡೆದಿದ್ದು, ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದು, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಲು ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಮಾನ್ಯ ಸಿ ಟಿ ರವಿ ಹಾಲಿ ಸದಸ್ಯರಾಗಿ ಪಕ್ಷ ಸಂಘಟನೆಗೆ ಸದನದ ಒಳಗೆ ಹಾಗೂ ಹೊರಗೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದ ಎನ್ ರಮೇಶ್ ಕುಮಾರ್ ಹಾಗೂ ಪಕ್ಷ ಸಂಘಟನೆಗಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದ ಶ್ರೀ ಎಂ.ಜಿ. ಮುಳೆ ಅವರುಗಳನ್ನು ಪಕ್ಷದ ಪರವಾಗಿ ಆತ್ಮೀಯವಾಗಿ ಅಭಿನಂದಿಸುವೆ ಎಂದು ಹೇಳಿದ್ದಾರೆ.
ಇನ್ನೂ ಈ ಕುರಿತು ಮಾಜಿ ಸಚಿವ ಸಿ ಟಿ ರವಿ ಟ್ವೀಟ್ ಮಾತನಾಡಿದ್ದು, ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ ಎಲ್ ಸಂತೋಷ್ ಜಿ ಯವರಿಗೆ, ಸನ್ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗು ಸ್ನೇಹಿತ ಪ್ರಹ್ಲಾದ್ ಜೋಶಿ ಅವರಿಗೆ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಹಾಗು ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.
BJP announces the candidatures of party leaders CT Ravi, N Ravikumar and MG Mule for the Karnataka Legislative Council biennial elections. pic.twitter.com/qGvH5Ke2d3
— ANI (@ANI) June 2, 2024












Click it and Unblock the Notifications